ನವದೆಹಲಿ: ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ ಭಾನುವಾರ ಮತ್ತೊಂದು ದಾಖಲೆ ಬರೆದಿದೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,52,879 ಕೊರೋನಾ ಪ್ರಕರಣ ವರದಿಯಾಗಿದೆ.
ಒಂದೇ ಬರೋಬ್ಬರಿ 839 ಮಂದಿ ಬಲಿಯಾಗಿದ್ದು, ಇದರೊಂದಿಗೆ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 1,69,275ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಕಳೆದ 32 ದಿನಗಳಿಂದ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 11,08,087ಕ್ಕೆ ಏರಿಕೆಯಾಗಿದೆ.
ಒಂದೇ ದಿನ 1,52,879 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,33,58,805ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 90,584 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,20,81,443ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ ದಿನ 14,12,047 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 25,66,26,850 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 10,15,95,147 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.