ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಸತತ 3ನೇ ದಿನವೂ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ.
ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ ಒಟ್ಟಾರೆ 2,34,692 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,45,26,609ಕ್ಕೆ ಏರಿಕೆಯಾಗಿದೆ.
ಒಂದೇ ದಿನ 1,341 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1,75,649ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,79,740ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,23,354 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,26,71,220ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ ದಿನ 14,95,397 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 26,34,76,625 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 11,99,37,641 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.