ನವದೆಹಲಿ: ಲಸಿಕೆ ಉತ್ಪಾದನೆಯ ಬೃಹತ್ ಕಂಪನಿ ಪುಣೆಯ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಬುಧವಾರ ತನ್ನ ಕೋವಿಶೀಲ್ಡ್ ಲಸಿಕೆಯ ದರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಭಾರತ ಸರ್ಕಾರದ ನಿರ್ದೇಶನದೊಂದಿಗೆ, ನಾವು ದರಪಟ್ಟಿಯನ್ನು ಬಿಡುಗಡೆಗೊಳಿಸುತ್ತಿದ್ದೇವೆ. ಪ್ರತಿ ಡೋಸ್ ಕೋವಿಶೀಲ್ಡ್ ಲಸಿಕೆಗೆ ರಾಜ್ಯ ಸರ್ಕಾರಗಳಿಗೆ 400 ರೂಪಾಯಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ 600 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.
ಈ ಕುರಿತು ಸೆರಂ ಇನ್‌ಸ್ಟಿಟ್ಯೂಟ್ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮುಂದಿನ ಎರಡು ತಿಂಗಳುಗಳಲ್ಲಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲಾಗುತ್ತದೆ. ಈ ಮೂಲಕ ಲಸಿಕೆ ಪೂರೈಕೆ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲಾಗುತ್ತದೆ ಎಂದು ಹೇಳಿಕೊಂಡಿದೆ.
ನಮ್ಮ ಕಂಪನಿ ಉತ್ಪಾದಿಸುವ ಲಸಿಕೆಯಲ್ಲಿ ಶೇ 50ರಷ್ಟನ್ನು ಕೇಂದ್ರದ ಲಸಿಕಾ ಅಭಿಯಾನಕ್ಕೆ ನೀಡಲಾಗುವುದು. ಇನ್ನುಳಿದ ಶೇ 50ರಷ್ಟನ್ನು ರಾಜ್ಯ ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಲಾಗುವುದು ಎಂದು ತಿಳಿಸಿದೆ.
ಸದ್ಯಕ್ಕೆ ಲಸಿಕೆಗಳಿಗೆ ಅತಿ ಹೆಚ್ಚಿನ ಬೇಡಿಕೆಯಿದ್ದು, ಈ ಪರಿಸ್ಥಿತಿ ಸವಾಲಾಗಿದೆ. ಇನ್ನು ನಾಲ್ಕೈದು ತಿಂಗಳುಗಳಲ್ಲಿ ರಿಟೇಲ್ ಮಾರುಕಟ್ಟೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಲಭ್ಯವಾಗಲಿದೆ ಎಂದು ತಿಳಿಸಿದೆ.
ಭಾರತದಲ್ಲಿ ಜನವರಿ 16ರಿಂದ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಮೇ 1ರಿಂದ ಮೂರನೇ ಹಂತದ ಲಸಿಕೆ ಅಭಿಯಾನ ಪ್ರಾರಂಭವಾಗಲಿದೆ. ಈ ಹಂತದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.