ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಣೆ ಮಾಡಿದೆ.
ಬೆಂಗಳೂರಿನ ಶಾಲೆಗಳಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದು, ಹತ್ತನೇ ತರಗತಿ, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಎಂದಿನಂತೆ ಮುಂದುವರೆಯುತ್ತವೆ. ಹತ್ತನೇ ತರಗತಿ ವಿದ್ಯಾರ್ಥಿಗಳಿಗೂ ಹಾಜರಾತಿ ಕಡ್ಡಾಯವಲ್ಲ ಎಂದು ತಿಳಿಸಿದ್ದಾರೆ. ತಕ್ಷಣದಿಂದಲೇ, ಅಂದರೆ ಏಪ್ರಿಲ್ 2ರಿಂದಲೇ ರಜೆ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
6 ರಿಂದ 9ನೇ ತರಗತಿ ಮಕ್ಕಳಿಗೆ ಪರೀಕ್ಷೆ ಯಾವಾಗ ನಡೆಸಲಾಗುತ್ತದೆ ಎಂಬ ಕುರಿತು ನಿರ್ಧಾರ ಕೈಗೊಂಡು ತಿಳಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಕೊರೊನಾ ಎರಡನೇ ಅಲೆ ಆತಂಕ ಆರಂಭವಾಗಿದ್ದು, ಬಿಬಿಎಂಪಿ ವಲಯದಲ್ಲಿ 90 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ವರದಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿದುಬಂದಿದೆ.
ಕರ್ನಾಟಕದಲ್ಲಿ ಗುರುವಾರ 4234 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಪೈಕಿ ಬೆಂಗಳೂರಿನಲ್ಲಿಯೇ 2906 ಪ್ರಕರಣಗಳು ದಾಖಲಾಗಿವೆ. ಒಂದು ದಿನದಲ್ಲಿ 1599 ಸೋಂಕಿತರು ಗುಣಮುಖರಾಗಿದ್ದು, ಸೋಂಕಿನಿಂದ 18 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 10,01,238ಕ್ಕೆ ಏರಿಕೆಯಾಗಿದೆ. ಈವರೆಗೂ 957769 ಸೋಂಕಿತರು ಗುಣಮುಖರಾಗಿದ್ದು, ಸಾವಿನ ಸಂಖ್ಯೆ 12585ಕ್ಕೆ ಏರಿಕೆಯಾಗಿದೆ. ಉಳಿದಂತೆ 30865 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.