ನವದೆಹಲಿ : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ಆತಂಕದ ನಡುವೆ ಲಸಿಕೆ ವಿತರಣೆ ವೇಗ ತಗ್ಗಿದೆ. ಮಂಗಳವಾರ ಸಂಜೆ 8 ಗಂಟೆ ವೇಳೆಗೆ ಕೇವಲ 5.62 ಲಕ್ಷ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಸೋಮವಾರ ಒಂದೇ ದಿನ 12 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿತ್ತು.
ಭಾರತದಲ್ಲಿ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 81 ದಿನಗಳೇ ಕಳೆದಿವೆ. ಈವರೆಗೂ 8,40,65,357 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ 89,60,966 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 53,77,011 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 97,30,304 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 42,68,788 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ:
ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 2,00,51,197 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 3,96,769 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 3,44,18,802 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 8,61,520 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು.