ನವದೆಹಲಿ: ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ವೇಳೆ ಭಾಗವಹಿಸುವ ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ಗುರುವಾರ ನೋಟಿಸ್ ನೀಡಿದೆ.
ಈ ಕುರಿತು ಉತ್ತರ ಪ್ರದೇಶದ ಮಾಜಿ ಡಿಜಿಪಿ ಮತ್ತು ಸೆಂಟರ್ ಫಾರ್ ಅಕೌಂಟೆಬಿಲಿಟಿ ಮತ್ತು ಸಿಸ್ಟಮಿಕ್ ಚೇಂಜ್ ಸಂಸ್ಥೆ ಅಧ್ಯಕ್ಷರಾಗಿರುವ ವಿಕ್ರಮ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರನ್ನೊಳಗೊಂಡ ಪೀಠ ನಡೆಸಿತು.
ಚುನಾವಣಾ ಪ್ರಚಾರದಲ್ಲಿ ತೊಡಗಿರುವವರು ಹಾಗೂ ಅಭ್ಯರ್ಥಿಗಳು, ಕೋವಿಡ್- 19 ಪ್ರಸರಣ ನಿಯಂತ್ರಿಸುವ ಸಂಬಂಧ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಪದೇಪದೇ ಉಲ್ಲಂಘಿಸುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.
ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು ಏ. 30ಕ್ಕೆ ಮುಂದೂಡಿತು.