ನವದೆಹಲಿ: ಕೇಂದ್ರ ಸರ್ಕಾರ ಮಂಗಳವಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಹಿರಿಯ ಅಧಿಕಾರಿ ತರುಣ್ ಬಜಾಜ್ ಅವರನ್ನು ಕಂದಾಯ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ತರುಣ್ ಬಜಾಜ್, 1988ರ ಬ್ಯಾಚಿನ ಹರಿಯಾಣ ಕೇಡರ್ ನ ಎಐಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದಾರೆ.
ತರುಣ್ ಬಜಾಜ್ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕಗೊಳ್ಳಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಸಚಿವಾಲಯ ಆದೇಶದಲ್ಲಿ ತಿಳಿಸಲಾಗಿದೆ.ಅಜಯ್ ಸೇಠ್ ನೂತನ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಲಿದ್ದಾರೆ. 1987ರ ಬ್ಯಾಚಿನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿಯಾಗಿರುವ ಅಜಯ್ ಸೇಠ್ , ಪ್ರಸ್ತುತ ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಜ್ಞಾನೇಶ್ ಕುಮಾರ್ ಅವರನ್ನು ಸಂಸದೀಯ ವ್ಯವಹಾರಗಳ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ವಿಶೇಷ ಕಾರ್ಯದರ್ಶಿ ಮತ್ತು ಹಣಕಾಸು ಸಲಹೆಗಾರ ಅಲಿ ರಾಜಾ ರಿಜ್ವಿ ಅವರನ್ನು ಸಾರ್ವಜನಿಕ ಉದ್ಯಮ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪಶ್ಚಿಮ ಬಂಗಾಳದ ಕೇಡರ್‌ನ 1988 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಇಂಡೆವರ್ ಪಾಂಡೆ ಅವರನ್ನು ಆಡಳಿತ ಸುಧಾರಣೆಗಳು ಮತ್ತು ಸಾರ್ವಜನಿಕ ಕುಂದುಕೊರತೆ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪಾಂಡೆ ಪ್ರಸ್ತುತ ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯದಲ್ಲಿ ವಿಶೇಷ ಕಾರ್ಯದರ್ಶಿಯಾಗಿದ್ದಾರೆ.
ಅಂಜಲಿ ಭಾವ್ರಾ ಅವರನ್ನು ವಿಕಲಚೇತನರ ಸಬಲೀಕರಣ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರು ಪ್ರಸ್ತುತ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ವಿಶೇಷ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜತಿಂದ್ರ ನಾಥ್ ಸ್ವೈನ್ ಅವರನ್ನು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಸ್ವೈನ್ 1988 ರ ಬ್ಯಾಚಿನ ತಮಿಳುನಾಡು ಕೇಡರ್ ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ .ಕಂದಾಯ ಇಲಾಖೆಯ ಕಾರ್ಯದರ್ಶಿ ಅನಿಲ್ ಕುಮಾರ್ ಜಾ ಅವರನ್ನು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ವಿಶೇಷ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.