ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರುತ್ತಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಲ್ಲರೂ ಸೋಂಕಿನ ವಿರುದ್ಧ ಹೋರಾಡಲು ಲಸಿಕೆ ಪಡೆದುಕೊಳ್ಳಬೇಕು ಎಂದು #SpeakUpForVaccinesForAll campaign ಮೂಲಕ ಮನವಿ ಮಾಡಿದ್ದಾರೆ.
ಪ್ರತಿಯೊಬ್ಬರಿಗೂ ಸುರಕ್ಷಿತ ಜೀವನದ ಹಕ್ಕಿದೆ. ದೇಶದಲ್ಲಿ ಕೊರೊನಾ ಲಸಿಕೆಯ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
#SpeakUpForVaccinesForAll ಎಂಬ ಅಭಿಯಾನವನ್ನು ಕಾಂಗ್ರೆಸ್ ಆರಂಭಿಸಿದ್ದು, ಆ ವಿಡಿಯೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. ಪ್ರತಿಯೊಬ್ಬರೂ ಸೋಂಕಿನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಿದೆ. ದೇಶಕ್ಕೆ ಕೊರೊನಾ ಲಸಿಕೆಗಳ ಅವಶ್ಯಕತೆಯಿದೆ. ಲಸಿಕೆಗಾಗಿ ನೀವು ನಿಮ್ಮ ದನಿ ಎತ್ತಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ.
75 ಸೆಕೆಂಡಿನ ಈ ವಿಡಿಯೋದಲ್ಲಿ ಕೊರೊನಾ ಸೋಂಕಿನಿಂದ ದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟು, ಸೋಂಕನ್ನು ನಿಯಂತ್ರಿಸುವಲ್ಲಿ ಕೇಂದ್ರ ವಿಫಲವಾಗಿರುವ ಕುರಿತು ಉಲ್ಲೇಖಿಸಲಾಗಿದೆ. ಈ ಮುನ್ನವೂ ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ, ಔಷಧಿ ಹಾಗೂ ಚುಚ್ಚುಮದ್ದಿನ ಅಭಾವದ ಕುರಿತು ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಕೊರೊನಾ ವಿರುದ್ಧ ಹೋರಾಡಲು ದೇಶದಲ್ಲಿ ಕೊರೊನಾ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಆದರೆ ಕೆಲವು ದಿನಗಳಿಂದ ಅಲ್ಲಿ ಲಸಿಕೆಗಳೇ ಇಲ್ಲವಾಗಿದೆ. ಇವೆಲ್ಲವನ್ನೂ ಗಮನಿಸದೇ ಭಾರತ ಲಸಿಕೆಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುತ್ತಿದೆ. ಲಸಿಕೆಯ ರಫ್ತನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದರು.
ಮಾರ್ಚ್ 1ರಿಂದ ದೇಶದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಏಪ್ರಿಲ್ 2ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ.