ಪಾಲಕ್ಕಾಡ್ : ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಅತ್ಯುತ್ತಮ ಹಾಗೂ ಪ್ರಭಾವಶಾಲಿ ಪ್ರದರ್ಶನ ನೀಡಲಿದೆ ಎಂದು ಮೆಟ್ರೋ ಮ್ಯಾನ್ ಇ ಶ್ರೀಧರನ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಕೇರಳ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ ಇ ಶ್ರೀಧರನ್ ಅವರು ಪೊನ್ನೈನಲ್ಲಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮತದಾನದ ನಂತರ ಮಾತನಾಡಿದ ಅವರು, "ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಪ್ರಭಾವಶಾಲಿ ಪ್ರದರ್ಶನ ನೀಡಲಿದೆ. ಆ ಬಗ್ಗೆ ಸಂಶಯವೇ ಬೇಡ" ಎಂದಿದ್ದಾರೆ.
ಪಾಲಕ್ಕಾಡ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಇ ಶ್ರೀಧರನ್, ಪಾಲಕ್ಕಾಡ್‌ನಲ್ಲಿ ತಾವು ದೊಡ್ಡ ಅಂತರದಿಂದ ಗೆಲುವು ಸಾಧಿಸುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ. ಬಿಜೆಪಿಗೆ ನನ್ನ ಪ್ರವೇಶ ಪಕ್ಷಕ್ಕೆ ಭಿನ್ನ ವರ್ಚಸ್ಸು ತಂದುಕೊಟ್ಟಿದೆ ಎಂದು ಹೇಳಿಕೊಂಡಿದ್ದಾರೆ.
ಕೇರಳದ ಪಾಲಕ್ಕಾಡ್ ಕ್ಷೇತ್ರದಲ್ಲಿ ಇ ಶ್ರೀಧರನ್ ಸ್ಪರ್ಧೆಯಿಂದ ಭಾರಿ ಪೈಪೋಟಿ ಇದೆ. ಮೆಟ್ರೋ ಮ್ಯಾನ್ ಇ ಶ್ರೀಧರನ್ ಅವರ ರಾಜಕೀಯ ಪ್ರವೇಶ ಈ ಕ್ಷೇತ್ರದತ್ತ ಎಲ್ಲರ ಚಿತ್ತ ನೆಡಲು ಕಾರಣವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.
ಕೇರಳದ 140 ಕ್ಷೇತ್ರಗಳಿಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.