ನವದೆಹಲಿ: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಪ್ರದೇಶಗಳಲ್ಲಿ ತಕ್ಷಣವೇ ಲಾಕ್‌ಡೌನ್ ವಿಧಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಗುರುವಾರ ಸೂಚಿಸಿದೆ.
ಆದಾಗ್ಯೂ, ಕೇಂದ್ರ ಸರ್ಕಾರ ಮೇ ತಿಂಗಳಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ತನ್ನ ಕೋವಿಡ್ ಮಾರ್ಗಸೂಚಿಗಳಲ್ಲಿ ಯಾವುದೇ ಉಲ್ಲೇಖ ಮಾಡಿಲ್ಲ.
ಕೇಂದ್ರ ಗೃಹ ಸಚಿವಾಲಯ ಇಂದು ಸಂಜೆ ಹೊರಡಿಸಿದ ಹೊಸ ಮಾರ್ಗಸೂಚಿಗಳಲ್ಲಿ, "ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಅಭೂತಪೂರ್ವ ಏರಿಕೆ"ಯನ್ನು ಗಮನದಲ್ಲಿಟ್ಟುಕೊಂಡು "ಅಗತ್ಯವಾದ ನಿಯಂತ್ರಣ ಕ್ರಮಗಳನ್ನು" ತೆಗೆದುಕೊಳ್ಳುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ.
ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆ ಮತ್ತು ದೆಹಲಿಯಂತಹ ದೇಶದ ಕೆಲವು ಭಾಗಗಳಲ್ಲಿ ಆಸ್ಪತ್ರೆಗಳಲ್ಲಿ ಬೆಡ್, ಐಸಿಯುಗಳು ಮತ್ತು ಆಮ್ಲಜನಕದ ಕೊರತೆಯ ನಡುವೆ ಕೇಂದ್ರ ಸರ್ಕಾರ ಕೋವಿಡ್ ನಿರ್ವಹಣೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಪರಿಸ್ಥಿತಿಯ ಮೌಲ್ಯಮಾಪನದ ಆಧಾರದ ಮೇಲೆ ತಕ್ಷಣದ ಅನುಷ್ಠಾನಕ್ಕಾಗಿ ಏಪ್ರಿಲ್ 25 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ, ಕಂಟೈನ್ ಮೆಂಟ್ ಕ್ರಮಗಳನ್ನು ಪರಿಗಣಿಸುವಂತೆ ಕೇಂದ್ರ ಗೃಹ ಸಚಿವಾಲಯ ಹೇಳಿದೆ.