ನವದೆಹಲಿ: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ 'ಕೋವಿಡ್ 19' ವಿರುದ್ಧ ಹೋರಾಡಲು ಸಾರ್ವಜನಿಕರು ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.
ಕಳೆದ ಮೂರು ದಿನಗಳಲ್ಲಿ ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಸೋಂಕಿನ ವಿರುದ್ಧ ಹೋರಾಡಲು ಸಾರ್ವಜನಿಕರು ಮಾಸ್ಕ್ ಧರಿಸುವುದು, ನಿಯಮಿತವಾಗಿ ಕೈತೊಳೆಯುವುದು ಸೇರಿದಂತೆ ಕೋವಿಡ್ 19 ವಿರುದ್ಧದ ಹೋರಾಟಕ್ಕೆ ರೂಪಿಸಿರುವ ಶಿಷ್ಟಾಚಾರಗಳನ್ನು ಅನುಸರಿಸಬೇಕು ಎಂದು ಪ್ರಧಾನಿ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.
'ಇದೇ ವೇಳೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಮತ್ತು ಆರೋಗ್ಯವಾಗಿರಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಅನುಸರಿಸಿ' ಎಂದು ಮೋದಿ ಹೇಳಿದರು.
'ವಿಶ್ವ ಆರೋಗ್ಯ ದಿನಚಾರಣೆ, ನಮ್ಮ ಭೂಮಿ ಆರೋಗ್ಯವನ್ನು ಕಾಪಾಡಲು ಹಗಲು ರಾತ್ರಿ ಶ್ರಮಿಸುತ್ತಿರುವ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುವ ಮತ್ತು ಅವರ ಕಾರ್ಯಕ್ಕೆ ಮೆಚ್ಚಿಗೆ ಸೂಚಿಸುವ ದಿನವಾಗಿದೆ ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
'ಆರೋಗ್ಯ ರಕ್ಷಣೆಯಲ್ಲಿ ಸಂಶೋಧನೆ ಮತ್ತು ಹೊಸತನಗಳನ್ನು ಬೆಂಬಲಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನವೂ ಇದಾಗಿದೆ' ಎಂದು ಮೋದಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.