ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,11,298 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3,847 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,73,69,093ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 3,15,235ಕ್ಕೆ ತಲುಪಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,19,907ಕ್ಕೆ ಏರಿಕೆಯಾಗಿದೆ.
ಈ ಮಧ್ಯೆ ಕಳೆದ 24 ಗಂಟೆಗಳಲ್ಲಿ 2,83,135 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,46,33,951ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 21,57,857 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 33,69,69,352 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 20,26,95,874 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.