ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಕೊಂಚ ತಗ್ಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,40,842 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 2,40,842 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 4529 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,65,30,132ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,99,266ಕ್ಕೆ ತಲುಪಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,05,399ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 3,55,102 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,34,25,467ಕ್ಕೆ ತಲುಪಿದೆ.
ಭಾರತದಲ್ಲಿ ನಿನ್ನೆ ಒಂದೇ 21,23,782 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ 32,86,07,937 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 19,50,04,184 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.