ನವದೆಹಲಿ: ದೇಶದಲ್ಲಿ ಗುರುವಾರ ಒಂದೇ ದಿನ 20,61,683 ಜನರಿಗೆ ಕೊರೊನಾ ವೈರಸ್ ಸೋಂಕು ಪರೀಕ್ಷೆಗಳನ್ನು ನಡೆಸಲಾಗಿದ್ದು, ಪಾಸಿಟಿವಿಟಿ ದರ 12.59ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ ನಡೆಸಿದ ಅತ್ಯಧಿಕ ಕೋವಿಡ್ ಪರೀಕ್ಷೆಗಳು ಇದಾಗಿವೆ. ಸತತ ಐದು ದಿನ 3 ಲಕ್ಷಕ್ಕಿಂತ ಕಡಿಮೆ ಹೊಸ ಪ್ರಕರಣಗಳು ದಾಖಲಾಗಿವೆ. ಇತ್ತ ಸತತ ಎಂಟನೇ ದಿನ ಹೆಚ್ಚು ಸೋಂಕಿತರು ಚೇತರಿಸಿಕೊಂಡಿದ್ದಾರೆ.
ದೇಶದಾದ್ಯಂತ ಸೋಂಕು ಕಾಣಿಸಿಕೊಂಡಾಗಿನಿಂದ ಈವರೆಗೆ 2,27,12,735 ಸೋಂಕಿತರು ಗುಣಮುಖರಾಗಿದ್ದಾರೆ.
ಮೇ 20 ರವರೆಗೆ 32,44,17,870 ಕೊರೊನಾ ಮಾದರಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
ತಮಿಳುನಾಡು, ಕೇರಳ, ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಶೇ 76.66 ರಷ್ಟು ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಸಚಿವಾಲಯ ತಿಳಿಸಿದೆ.
ಕರ್ನಾಟಕ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ರಾಜ್ಯಗಳು ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ 69.47 ರಷ್ಟನ್ನು ಹೊಂದಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಇದುವರೆಗೆ 19,18,79,503 ಡೋಸ್ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ.