ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ಸೋಂಕು ತಡೆಗೆ ರೂಪಿಸಲಾಗಿರುವ ರಾಷ್ಟ್ರೀಯ ನೀತಿಯ ಕುರಿತು ರಾಜಕೀಯ ಒಮ್ಮತ ಮೂಡಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಟ್ವಿಟರ್‌ನಲ್ಲಿ ವಿಡಿಯೊ ಸಂದೇಶ ಪ್ರಕಟಿಸಿರುವ ಅವರು, ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಚ್ಚೆತ್ತುಕೊಂಡು ತಮ್ಮ ಕರ್ವ್ಯಗಳನ್ನು ಪೂರೈಸುವ ಸಮಯ ಎಂದು ಹೇಳಿದ್ದಾರೆ.
ಕೋವಿಡ್ ಲಸಿಕೆಯನ್ನು ದೇಶದ ಎಲ್ಲ ನಾಗರಿಕರಿಗೆ ಉಚಿತವಾಗಿ ನೀಡಬೇಕು ಎಂದೂ ಅವರು ಆಗ್ರಹಿಸಿದ್ದಾರೆ.
ಸದ್ಯದ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಪ್ರತಿಯೊಂದು ಬಡ ಕುಟುಂಬದವರ ಬ್ಯಾಂಕ್ ಖಾತೆಗೆ ₹ 6,000 ವರ್ಗಾಯಿಸಬೇಕು ಎಂದೂ ಸೋನಿಯಾ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೋವಿಡ್ ಪರೀಕ್ಷೆಯ ಸಂಖ್ಯೆಯನ್ನು ಇನ್ನೂ ಹೆಚ್ಚಿಸಬೇಕು. ಅಗತ್ಯ ವೈದ್ಯಕೀಯ ಉಪಕರಣಗಳು, ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಬೇಕು ಎಂದು ಅವರು ಹೇಳಿದ್ದಾರೆ.
'ಸರ್ಕಾರದ ಜತೆ ನಾವಿದ್ದೇವೆ'
ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರದ ಜತೆಗಿರಲಿದೆ ಎಂದಿರುವ ಸೋನಿಯಾ, ಇಂಥ ಪರೀಕ್ಷೆಯ ಸಮಯದಲ್ಲಿ ಎಲ್ಲ ಭಾರತೀಯರು ಒಗ್ಗಟ್ಟಾಗಬೇಕು ಎಂದು ಕರೆ ನೀಡಿದ್ದಾರೆ.
ದೇಶದಲ್ಲಿ ಶನಿವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 4,01,837 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, 3,467 ಸೋಂಕಿತರು ಮೃತಪಟ್ಟಿದ್ದಾರೆ.