ಮಂಗಳೂರು: ಮಂಗಳೂರಿನ ಪ್ರಸಿದ್ಧ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೆ, ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ಬೆಳಿಗ್ಗೆ ನಗರದ ಸೂಪರ್ ಮಾರ್ಕೆಟ್‌ನಲ್ಲಿ ಫೋನಿನಲ್ಲಿ ಮಾತಾಡುತ್ತಿದ್ದ ಡಾ. ಕಕ್ಕಿಲಾಯ ಅವರು ಮಾಸ್ಕ್ ಧರಿಸದೇ ಬಿಲ್ ಕೌಂಟರ್ ಬಳಿ ನಿಂತಿದ್ದರು. ಇದನ್ನು ಗಮನಿಸಿದ ಅಲ್ಲಿನ ಸಿಬ್ಬಂದಿ ಓರ್ವರು ದಯವಿಟ್ಟು ಮಾಸ್ಕ್ ಧರಿಸಿ, ಇಲ್ಲಿ ಎಲ್ಲರಿಗೂ ಒಂದೇ ನಿಯಮ ಇರುವುದು ಎಂದಿದ್ದರು. ಇದಕ್ಕೆ ಡಾ.ಕಕ್ಕಿಲಾಯ ಅವರು ವಿರೋಧ ವ್ಯಕ್ತಪಡಿಸಿ ವಾಗ್ವಾದಕ್ಕೆ ಇಳಿದು, ಮಾಸ್ಕ್ ಧರಿಸಲು ನಿರಾಕರಿಸಿದ್ದರು.
ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಪರ್ ಮಾರ್ಕೆಟ್ ಸಿಬ್ಬಂದಿ ಬುಧವಾರ ಮಧ್ಯಾಹ್ನ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ಈ ಕುರಿತು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪ್ರತಿಕ್ರಿಯಿಸಿ, ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಕೋವಿಡ್ ನಿಯಮ ಉಲ್ಲಂಘಿಸಿದ್ದಲ್ಲದೇ, ಸರ್ಕಾರದ ಮಾರ್ಗಸೂಚಿಗಳನ್ನೇ ಪ್ರಶ್ನಿಸಿದ್ದಾರೆ. ಹೀಗಾಗಿ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.