ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕು ಸಾಂಕ್ರಾಮಿಕ ಅಬ್ಬರ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 53,256 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಇದು ಕಳೆದ 88 ದಿನಗಳಲ್ಲೇ ಕನಿಷ್ಠ ಪ್ರಮಾಣದ್ದಾಗಿದೆ.
ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 53,256 ಹೊಸ ಸೋಂಕು ಪ್ರಕರಣ ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,99,35,221ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 1,422 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 3,88,135ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 78,190 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,88,44,199ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 7,02,887 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 13,88,699 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 39,24,07,782ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈ ವರೆಗೂ 28,00,36,898 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.