ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗದಲ್ಲಿ ಸ್ಥಿರತೆ ಕಂಡು ಬಂದಿದೆ. ಪ್ರತಿನಿತ್ಯ ಹೊಸ ಪ್ರಕರಣಗಳ ಸಂಖ್ಯೆ 1.30 ಲಕ್ಷದ ಆಸುಪಾಸಿನಲ್ಲಿ ಇರುವುದು ಪರಿಸ್ಥಿತಿ ಕೊಂಚ ನಿಯಂತ್ರಣಕ್ಕೆ ಬಂದಿದೆ ಎಂಬುದಕ್ಕೆ ಉದಾಹರಣೆಯಾಗಿದೆ.
ದೇಶದಲ್ಲಿ ಒಂದೇ ದಿನ ಶುಕ್ರವಾರದ ವರೆಗಿನ ಗಣನೆಯಂತೆ 1,32,364 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,07,071 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2713 ಮಂದಿ ಪ್ರಾಣ ಬಿಟ್ಟಿದ್ದಾರೆ.
ಭಾರತದಲ್ಲಿ ಒಟ್ಟು 2,85,74,350 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,65,97,655 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,40,702 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 16,35,993 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಒಂದೇ ದಿನ 20.75 ಲಕ್ಷ ಮಂದಿಗೆ ಪರೀಕ್ಷೆ:
ಭಾರತದಲ್ಲಿ ಪ್ರತಿನಿತ್ಯ ಹೆಚ್ಚು ಹೆಚ್ಚು ಜನರಿಗೆ ಕೊರೊನಾವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 20,75,428 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 35,74,33,846 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
ದೇಶದಲ್ಲಿ 22.41 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ
ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯು ಹೈದ್ರಾಬಾದ್ ನಲ್ಲಿ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸುವುದಕ್ಕೆ ಭಾರತದಲ್ಲಿ ಅನುಮೋದನೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 139 ದಿನಗಳಲ್ಲಿ 22,41,09,448 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.