ಬಿಹಾರ: ಭಾರತ್ ಬಯೋಟೆಕ್ ಸಿದ್ಧಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನು ಇದೇ ಮೊದಲ ಬಾರಿಗೆ ಪಾಟ್ನಾದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಮಕ್ಕಳ ಮೇಲೆ ಪ್ರಯೋಗವನ್ನು ಆರಂಭಿಸಿದೆ.
ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಮೇ.11 ರಂದು 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ಬಳಕೆ ಕುರಿತ 2 ಮತ್ತು 3ನೇ ಹಂತದ ಪ್ರಯೋಗಕ್ಕೆ ಅನುಮತಿ ನೀಡಿತ್ತು.
ನೀತಿ ಆಯೋಗದ ಸದಸ್ಯ ಹಾಗೂ ರಾಷ್ಟ್ರೀಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ವಿಕೆ ಪೌಲ್ ಅವರು ಈ ಹಿಂದೆ ಹೇಳಿಕೆ ನೀಡಿ, 2 ರಿಂದ 18 ವರ್ಷದೊಳಗಿನ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಕೋವಾಕ್ಸಿನ್ ಅನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದಿಸಿದೆ ಎಂದು ಹೇಳಿದ್ದರು.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 21,85,46,667 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.