ನವದೆಹಲಿ: ಕಾಂಗ್ರೆಸ್‌ಗೆ ಜನಸಾಮಾನ್ಯರ ಮೇಲೆ ಕಾಳಜಿ ಇದ್ದರೆ, ಪಕ್ಷದ ಆಡಳಿತವಿರುವ ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಸಲಿ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಹಾಗಿದ್ದರೂ ಬಿಜೆಪಿ ಆಳ್ವಿಕೆಯ ಮಧ್ಯಪ್ರದೇಶ, ಕರ್ನಾಟಕದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ₹100 ದಾಟಿದರೂ ಆ ರಾಜ್ಯಗಳಲ್ಲೂ ತೆರಿಗೆ ಕಡಿತಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಈ ಮೂಲಕ ಸಚಿವ ಪ್ರಧಾನ್ ಧ್ವಂದ್ವ ನಿಲುವು ತಾಳಿದ್ದಾರೆ.
ದೇಶದಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಆರು ವಾರಗಳಲ್ಲಿ ಇಂಧನ ಬೆಲೆ ಲೀಟರ್‌ಗೆ 5.72 ಗಳಿಂದ 6.25 ಗಳಿಗೆ ಏರಿಕೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವುದು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತೆರಿಗೆ ಹೊರೆಯಿಂದಾಗಿ ಇಂಧನ ಬೆಲೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಧರ್ಮೇಂದ್ರ ಪ್ರಧಾನ್, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮತ್ತು ಅಭಿವೃದ್ಧಿ ಕಾರ್ಯಗಳ ವೆಚ್ಚಗಳನ್ನು ಭರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯಿಂದ ದೊರಕುವ ಹೆಚ್ಚುವರಿ ಹಣದ ಅಗತ್ಯವಿದೆ ಎಂದು ಇಂಧನ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇಂಧನ ಬೆಲೆ ಏರಿಕೆಯಿಂದ ಗ್ರಾಹಕರಿಗೆ ತೊಂದರೆಯಾಗಿದೆ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಲಸಿಕೆ, ಆರೋಗ್ಯ ಮೂಲಸೌಕರ್ಯಗಳ ಜೊತೆಗೆ ಬಡವರಿಗೆ ಉಚಿತ ಆಹಾರ ಧ್ಯಾನ ಒದಗಿಸಲು ಸರ್ಕಾರ ಒಂದು ಲಕ್ಷ ಕೋಟಿ ರೂ. ವ್ಯಯ ಮಾಡುತ್ತಿದೆ ಎಂದು ಹೇಳಿದ್ದಾರೆ.
ಇಂಧನ ಬೆಲೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಿರಂತರ ಆರೋಪ ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನ್, ಕಾಂಗ್ರೆಸ್ ಆಳ್ವಿಕೆಯ ಮಹಾರಾಷ್ಟ್ರ, ಪಂಜಾಬ್, ರಾಜಸ್ಥಾನಗಳಲ್ಲಿ ಇಂಧನ ಬೆಲೆ ದುಬಾರಿಯಾಗಿದೆ? ಇಂಧನ ಬೆಲೆ ಏರಿಕೆಯಿಂದ ಬಡವರಿಗೆ ತೊಂದರೆಯಾಗಿದೆ ಎಂಬುದರ ಬಗ್ಗೆ ರಾಹುಲ್ ಗಾಂಧಿ ನಿಜವಾದ ಕಾಳಜಿ ಹೊಂದಿದ್ದರೆ ಕಾಂಗ್ರೆಸ್ ಆಳ್ವಿಕೆಯ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಇಂಧನಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ಸೂಚಿಸಬೇಕು ಎಂದಿದ್ದಾರೆ.
ಹಾಗಿದ್ದರೂ ಬಿಜೆಪಿ ಆಳುವ ಕರ್ನಾಟಕ, ಮಧ್ಯಪ್ರದೇಶದಲ್ಲಿ ಇಂಧನ ಬೆಲೆ
100 ದಾಟಿದರೂ ಈ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ.