ಲಡಾಖ್: ಭಯೋತ್ಪಾದನೆ, ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೊರತೆಯೇ ಲಡಾಖ್'ನ್ನು 'ಕೇಂದ್ರಾಡಳಿತ ಪ್ರದೇಶ' ಮಾಡಲು ಪ್ರಮುಖ ಕಾರಣವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.
ಮೂರು ದಿನಗಳ ಕಾಲ ಲಡಾಖ್'ಗೆ ಭೇಟಿ ನೀಡಿರುವ ರಾಜನಾಥ್ ಸಿಂಗ್ ಅವರು ಇಂದು ಲೇಹ್'ಗೆ ಭೇಟಿ ನೀಡಿದ್ದು, ಈ ವೇಳೆ ಬಾರ್ಡರ್ ರೋಡ್ ಆರ್ಗನೈಜೇಷನ್ (ಬಿಆರ್ಒ) ನಿರ್ಮಿಸಿರುವ 63 ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟನೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ದೇಶದ ಹಲವು ಪ್ರದೇಶಗಳಲ್ಲಿ ಸಂಪರ್ಕ ಸಾಧಿಸಲು ಬಾರ್ಡರ್ ರೋಡ್ ಆರ್ಗನೈಜೇಷನ್ ಬಹುಮುಖ್ಯ ಪಾತ್ರವಹಿಸಿದೆ ಎಂದು ಕೊಂಡಾಡಿದ್ದಾರೆ.
ದೇಶದ ಅಭಿವೃದ್ಧಿಗೆ ಹಲವು ಪ್ರದೇಶಗಳ ಸಂಪರ್ಕಿಸುವುದು ಬಹುಮುಖ್ಯವಾಗುತ್ತದೆ. ಇದರಲ್ಲಿ ಬಾರ್ಡರ್ ರೋಡ್ ಆರ್ಗನೈಜೇಷನ್ ಬಹುಮುಖ್ಯ ಪಾತ್ರವಹಿಸಿದೆ ಎಂದು ಹೇಳಿದ್ದಾರೆ.
ಲಡಾಖ್'ನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಭಯೋತ್ಪಾದನೆ ಹಾಗೂ ಸಾಮಾಜಿಕ ಆರ್ಥಿಕ ಅಭಿವೃದ್ಧಿಯ ಕೊರತೆಯೇ ಕಾರಣವಾಗಿದೆ. ಲಡಾಖ್'ನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಿದ ಬಳಿಕ ಈ ಪ್ರದೇಶದಲ್ಲಿ ಭಯೋತ್ಪಾದನೆ ಕಡಿಮೆಯಾಗಿದೆ. ಕೇಂದ್ರ ಸರ್ಕಾರ ಲಡಾಖ್ ನಲ್ಲಿ ಬಂಡವಾಳ ಹೂಡಿಕೆಯಾಗುವಂತೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಲ್ಲಿನ ಮೂಲಭೂತ ಸೌಕರ್ಯಗಳು ಸುಧಾರಣೆಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಡಾಖ್'ನ ಎಲ್ಲಾ ರಾಜಕೀಯ ನಾಯಕರೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ನಲ್ಲಿ ರಾಜಕೀಯ ಪ್ರಕ್ರಿಯೆ ಆರಂಭವಾಗುವಂತೆ ಮಾಡಲು ಪ್ರಧಾನಿ ಮೋದಿ ಬಯಸಿದ್ದಾರೆ. ಈಗಾಗಲೇ ಜಮ್ಮು ಮತ್ತು ಕಾಶ್ಮೀರ ರಾಜಕೀಯ ಪಕ್ಷಗಳ ನಾಯಕರೊಂದಿಗೂ ಮಾತುಕತೆ ನಡೆಸಿದ್ದಾರೆ. ಲಡಾಖ್ ಜನರೊಂದಿಗೂ ಶೀಘ್ರದಲ್ಲಿಯೇ ಮಾತುಕತೆ ನಡೆಸಲಿದ್ದಾರೆಂದು ಹೇಳಿದ್ದಾರೆ.