ನವದೆಹಲಿ: ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಲು ಮತ್ತು ಕಠಿಣ ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಶನಿವಾರ ರಾಜ್ಯ ಸರ್ಕಾರಗಳಿಗೆ ಹೇಳಿದೆ.
ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ದೇಶದ ಹಲವೆಡೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ದಾಳಿ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ.
ವೈದ್ಯರು ಮತ್ತು ಡಾಕ್ಟರ್ ಮೇಲೆ ಹಲ್ಲೆ, ಬೆದರಿಕೆ ಘಟನೆಗಳು ಅವರ ನೈತಿಕ ಸ್ಥೈರ್ಯ ಕುಂದಿಸುವ ಹಾಗೂ ಅಭದ್ರತೆ ಭಾವ ಮೂಡಿಸುವ ಸಾಧ್ಯತೆಯಾಗಿದೆ. ಇದು ಆರೋಗ್ಯ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಭಲ್ಲಾ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಪರಿಸ್ಥಿತಿಯಲ್ಲಿ, ಆರೋಗ್ಯ ವೃತ್ತಿಪರರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಕಡ್ಡಾಯವಾಗಿದೆ ಎಂದು ಗೃಹ ಕಾರ್ಯದರ್ಶಿ ಹೇಳಿದ್ದಾರೆ. ಹಲ್ಲೆಕೋರರ ವಿರುದ್ಧದ ಎಫ್ ಐಆರ್ ದಾಖಲಿಸಬೇಕು, ಇಂತಹ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆಗೊಳಪಡಿಸಬೇಕು, ಸಾಂಕ್ರಾಮಿಕ ಕಾಯಿಲೆಗಳ (ತಿದ್ದುಪಡಿ) ಕಾಯ್ದೆ 2020 ರ ಅನ್ವಯ ಅವರಿಗೆ ಶಿಕ್ಷೆ ಕೊಡಿಸಬಹುದು ಎಂದು ಅವರು ಹೇಳಿದ್ದಾರೆ.
ಈ ಕಾನೂನಿನ ಪ್ರಕಾರ, ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ. ಒಂದು ವೇಳೆ ಕರ್ತವ್ಯ ನಿರತ ವೈದ್ಯರ ಮೇಲೆ ಹಿಂಸೆಯಂತಹ ಘಟನೆಗಳು ನಡೆದರೆ ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ ಐದು ಲಕ್ಷ ರೂ.ವರೆಗೂ ದಂಡ ವಿಧಿಸಬಹುದಾಗಿದೆ.