ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಿಂದಾಗಿ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ.
ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ 10 ರಾಜ್ಯಗಳಿಗೆ ತಲಾ ಒಂದೊಂದು ತಂಡವನ್ನು ಕಳುಹಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಮಾತನಾಡಿ, 'ಹಲವು ರಾಜ್ಯಗಳಲ್ಲಿ ಕೋವಿಡ್-19 ಸೋಂಕು ಮತ್ತೆ ಹೆಚ್ಚಾಗುತ್ತಿದ್ದು, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಸೇರಿದಂತೆ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು' ಎಂದು ಹೇಳಿದ್ದಾರೆ.
ಜುಲೈನಲ್ಲಿ ಇದುವರೆಗೆ ವರದಿಯಾದ ಹೊಸ ಕೋವಿಡ್-19 ಪ್ರಕರಣಗಳಲ್ಲಿ ಶೇಕಡಾ 73.4ರಷ್ಟು ಪ್ರಕರಣಗಳು ಕೇರಳ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಪತ್ತೆಯಾಗಿವೆ ಎಂದು ಅಗರ್ವಾಲ್ ಹೇಳಿದ್ದಾರೆ.
ಕಳೆದ ಒಂದು ವಾರದಲ್ಲಿ ದೇಶದ ವಿವಿಧ ರಾಜ್ಯಗಳ 55 ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇಕಡಾ 10ಕ್ಕಿಂತ ಹೆಚ್ಚು ವರದಿಯಾಗಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ, ಛತ್ತೀಸ್‌ಗಡ, ಅಸ್ಸಾಂ, ಮೇಘಾಲಯ, ಒಡಿಶಾ, ಮಿಜೋರಾಂ, ಅರುಣಾಚಲ ಪ್ರದೇಶ, ಮಣಿಪುರ, ನಾಗಾಲ್ಯಾಂಡ್ ಮತ್ತು ತ್ರಿಪುರಕ್ಕೆ ತಲಾ ಒಂದೊಂದು ತಂಡವನ್ನು ಕಳುಹಿಸಲಾಗಿದೆ ಎಂದು ಅಗರ್ವಾಲ್ ತಿಳಿಸಿದ್ದಾರೆ.
ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿ.ಕೆ. ಪಾಲ್ ಮಾತನಾಡಿ, 'ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಭಾರತದಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ನಿಯಮಗಳನ್ನು ಪಾಲಿಸಬೇಕು' ಎಂದು ತಿಳಿಸಿದ್ದಾರೆ.
ಮಂಗಳವಾರ ದೇಶದಾದ್ಯಂತ ಹೊಸದಾಗಿ 31,443 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3.09 ಕೋಟಿಗೆ (3,09,07,282) ಏರಿಕೆಯಾಗಿದೆ.
ಇಂದು ವರದಿಯಾಗಿರುವ 2,020 ಮರಣ ಪ್ರಕರಣವೂ ಸೇರಿ ಒಟ್ಟು 4,10,784 ಜನರು ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಸದ್ಯ ದೇಶದಲ್ಲಿ 4,32,778 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.