ನವದೆಹಲಿ: ಜುಲೈ 19 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಕೋವಿಡ್ ಸಂಬಂಧಿತ ಎಲ್ಲಾ ಶಿಷ್ಟಾಚಾರಗಳನ್ನು ಪಾಲಿಸಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೋಮವಾರ ಹೇಳಿದ್ದಾರೆ. ಅಧಿವೇಶನ ಸಂದರ್ಭದಲ್ಲಿ ಸಂಸತ್ ಆವರಣ ಪ್ರವೇಶಿಸುವ ಮುನ್ನ ಕೋವಿಡ್ ಲಸಿಕೆ ಪಡೆಯದವರು ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಸಂಸತ್ ಕಾಂಪ್ಲೆಕ್ಸ್ ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರ್ಲಾ, 323 ಸಂಸದರು ಲಸಿಕೆ ಪಡೆದುಕೊಂಡಿದ್ದಾರೆ. ಕೆಲ ವೈದ್ಯಕೀಯ ಕಾರಣದಿಂದ 23 ಸಂಸದರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿಲ್ಲ ಎಂದು ತಿಳಿಸಿದರು. ಸಂಸತ್ತಿನ ಉಭಯ ಸದನಗಳ ಕಲಾಪಗಳು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿವೆ. ಜುಲೈ 19 ರಂದು ಆರಂಭವಾಗುವ ಸಂಸತ್ ಅಧಿವೇಶನ ಆಗಸ್ಚ್ 13ಕ್ಕೆ ಮುಕ್ತಾಯವಾಗಲಿದೆ ಎಂದರು.
ಸಾಂಕ್ರಾಮಿಕ ಆರಂಭವಾದಾಗಿನಿಂದಲೂ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿತ್ತು. ಕಳೆದ ವರ್ಷದ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲಾಗಿತ್ತು. ಸಾಮಾನ್ಯವಾಗಿ ಮುಂಗಾರು ಅಧಿವೇಶನ ಜುಲೈನಲ್ಲಿ ಆರಂಭವಾಗಬೇಕಿತ್ತು. ಆದರೆ, ಕೋವಿಡ್ ಸಾಂಕ್ರಾಮಿಕದ ಪರಿಸ್ಥಿತಿಯಿಂದಾಗಿ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಆರಂಭವಾಗಿತ್ತು.