ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ, ಮುರುಗೇಶ್ ನಿರಾಣಿ ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖ ನಾಯಕರುಗಳು ಹಾಗೂ ಬೊಮ್ಮಾಯಿ ಕುಟುಂಬಸ್ಥರು ಪಾಲ್ಗೊಂಡಿದ್ದರು.ಪ್ರಮಾಣ ವಚನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಂಪುಟ ರಚನೆಗೆ ಆಷಾಡ ಮುಗಿಯುವ ತನಕ ಕಾಯುವುದಿಲ್ಲ" ಎಂದಿದ್ದಾರೆ.
ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದರು.ಕರ್ನಾಟಕದ ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ ಹಾಗೂ ಗಂಗಮ್ಮ ದಂಪತಿಯ ಹಿರಿಯ ಪುತ್ರನಾಗಿ ಜನವರಿ 28, 1960ರಲ್ಲಿ ಬಸವರಾಜ್ ಬೊಮ್ಮಾಯಿ ಜನಿಸಿದ್ದರು. ಈ ಹಿಂದಿನ ಯಡಿಯೂರಪ್ಪ ಸಂಪುಟದಲ್ಲಿಯೂ ಗೃಹ ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾಗಿದ್ದವರು. ಇವರು ಹಾವೇರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಇವರು ಈ ಹಿಂದೆ ಕರ್ನಾಟಕ ಸರ್ಕಾರದಲ್ಲಿ ಜಲಸಂಪನ್ಮೂಲ ಹಾಗೂ ಸಹಕಾರ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರುವ ಬಸವರಾಜ್ ಬೊಮ್ಮಾಯಿ ಅವರು ಜನತಾ ದಳದಿಂದ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು.ಕರ್ನಾಟಕ ವಿಧನ ಪರಿಷತ್ತಿನ ಸದಸ್ಯರಾಗಿ, ಎರಡು ಬಾರಿ ಧಾರವಾಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಇವರು ಆಯ್ಕೆಯಾಗಿದ್ದರು. ಇವರು ಜನತಾದಳ ತೊರೆದು , 2008ರಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಿದ್ದರು. 2008ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದರು.