ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ನಡುವೆ ಲಸಿಕೆ ವಿತರಣೆ ಅಭಿಯಾನ ಸಮಾರೋಪಾದಿಯಲ್ಲಿ ನಡೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ 32,40,007 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ.
18 ರಿಂದ 44 ವಯೋಮಾನದ 16,00,825 ಜನರಿಗೆ ಮೊದಲ ಡೋಸ್ ಹಾಗೂ 1,09,913 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ ಇದೇ ವಯೋಮಾನದ 10,45,24,240 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 30,42,302 ಜನರಿಗೆ ಎರಡನೇ ಡೋಸ್ ಲಸಿಕೆ ವಿತರಿಸಲಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 172 ದಿನಗಳಲ್ಲಿ 36 ಕೋಟಿಗಿಂತಲೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 36,09,56,621 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ನಾಲ್ಕು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ:
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.
ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.