ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ವಿರುದ್ಧ ಹೋರಾಟಕ್ಕೆ ಲಸಿಕೆ ಅಭಿಯಾನ ಆರಂಭಿಸಿ 175 ದಿನಗಳಾಗಿವೆ. ದೇಶದಲ್ಲಿ ಈವರೆಗೂ 37 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ.
ದೇಶದಲ್ಲಿ ಗುರುವಾರ ರಾತ್ರಿ 7 ಗಂಟೆ ವೇಳೆಗೆ 27,86,028 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 37,19,25,602 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
18 ರಿಂದ 44 ವಯೋಮಾನದ 13,28,636 ಜನರಿಗೆ ಮೊದಲ ಡೋಸ್ ಹಾಗೂ 1,24,570 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 10,98,62,585 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 35,08,932 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.
50 ಲಕ್ಷಕ್ಕಿಂತ ಹೆಚ್ಚು ಡೋಸ್ ಲಸಿಕೆ ವಿತರಿಸಿದ ರಾಜ್ಯಗಳು:
ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 18 ರಿಂದ 44 ವಯೋಮಾನದ 50 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.
ಕೊರೊನಾವೈರಸ್ ಲಸಿಕೆ ವಿತರಣೆ ಹಂತಗಳು:
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.
ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.