ನವದೆಹಲಿ: ದೇಶದ ಈಶಾನ್ಯ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಂಟು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಇಂದು (ಜುಲೈ 13) ಸಭೆ ನಡೆಸಲಿರುವುದಾಗಿ ತಿಳಿದುಬಂದಿದೆ.
ಅಸ್ಸಾಂ, ನಾಗಾಲ್ಯಾಂಡ್, ತ್ರಿಪುರ, ಸಿಕ್ಕಿಂ, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೊರೊನಾ ಸ್ಥಿತಿಗತಿ ಕುರಿತ ಚರ್ಚೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ ಎಂದು ಅಧೀಕೃತ ಮೂಲಗಳು ತಿಳಿಸಿವೆ.
ದೇಶದಲ್ಲಿ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ ತಗ್ಗಿದ್ದರೂ, ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದು ಗೋಚರಿಸುತ್ತಿದೆ. ಅದರಲ್ಲೂ ಈಶಾನ್ಯ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ರಾಜ್ಯಗಳಲ್ಲಿನ ಕೊರೊನಾ ಪರಿಸ್ಥಿತಿ ಕುರಿತ ಚರ್ಚೆಗೆ ಪ್ರಧಾನಿ ಮೋದಿಯವರು ವಿಡಿಯೋ ಸಂವಾದ ನಡೆಸಲಿರುವುದಾಗಿ ತಿಳಿದುಬಂದಿದೆ.
ಭಾರತದಲ್ಲಿ ಸೋಮವಾರ 37,154 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 39,649 ಸೋಂಕಿತರು ಗುಣಮುಖರಾಗಿದ್ದು, 724 ಜನರು ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಒಟ್ಟು 3,08,74,376 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 3,00,14,713 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 4,08,764 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,50,899 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.