ನವದೆಹಲಿ: ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ವರದಿಯು ಆಧಾರ ರಹಿತ ಆರೋಪವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಸಂಸತ್ ಅಧಿವೇಶನದ ಮೂರನೇ ದಿನವಾದ ಗುರುವಾರ ರಾಜ್ಯಸಭೆಯಲ್ಲಿ ಅವರು ಮಾತನಾಡಿದರು. "ಈ ಬೇಹುಗಾರಿಕೆ ಆರೋಪದ ಹಿಂದೆ ಎಲ್ಲ ಪ್ರತಿಪಕ್ಷಗಳ ಕೈವಾಡವಿದೆ. ಪೆಗಾಸಸ್ ಮೂಲಕ ಗೂಢಾಚಾರಿಕೆ ನಡೆಸಿರುವ ಬಗ್ಗೆ ಯಾವುದೇ ಆಧಾರಗಳಿಲ್ಲದೇ ಆರೋಪಿಸಲಾಗುತ್ತಿದೆ," ಎಂದು ಹೇಳಿದರು.
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಹೇಳಿಕೆ ನೀಡುತ್ತಿದ್ದಂತೆ ಪ್ರತಿಪಕ್ಷ ನಾಯಕರು ಕೆಂಡಾಮಂಡಲರಾದರು. ಟಿಎಂಸಿ ಸಂಸದ ಶಾಂತಾನು ಸೇನ್ ಮಧ್ಯ ಪ್ರವೇಶಿಸುತ್ತಿದ್ದಂತೆ ಕಲಾಪದಲ್ಲಿ ಗದ್ದಲ ಗಲಾಟೆ ಹೆಚ್ಚಾಯಿತು. ಈ ಹಿನ್ನೆಲೆ ರಾಜ್ಯಸಭೆಯನ್ನು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.
ಸೋಮವಾರ ಪೆಗಾಸಸ್ ಬಗ್ಗೆ ಅಶ್ವಿನಿ ವೈಷ್ಣವ್ ಉತ್ತರ:
"ಪೆಗಾಸಸ್ ತಂತ್ರಾಂಶದ ಬಗ್ಗೆ ನಾವು ತರ್ಕಬದ್ಧವಾಗಿ ವಿಶ್ಲೇಷಣೆ ಮಾಡಿದಾಗ ಇದರ ಹಿಂದೆ ಯಾವುದೇ ಆಧಾರವಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ನಮ್ಮ ಸಂಸ್ಥೆಗಳ ಕಣ್ಗಾವಲಿನಲ್ಲಿ ಇರುವ ಕಾನೂನು ಮತ್ತು ದೃಢವಾದ ಅಂಕಿ-ಅಂಶಗಳಲ್ಲಿ ಯಾವುದೇ ರೀತಿ ಅಕ್ರಮ ಪ್ರವೇಶಕ್ಕೆ ಅವಕಾಶವೇ ಇಲ್ಲ. ಭಾರತದಲ್ಲಿ ರಾಷ್ಟ್ರೀಯ ಭದ್ರತೆಯ ಉದ್ದೇಶಕ್ಕಾಗಿ ಎಲೆಕ್ಟ್ರಾನಿಕ್ ಸಂವಹನದ ಕಾನೂನುಬದ್ಧ ಪ್ರತಿಬಂಧನದ ಒಂದು ಸುಸ್ಥಾಪಿತ ಕಾರ್ಯವಿಧಾನವಿದೆ," ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು.
ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಭಾರತದಲ್ಲಿ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ತೀವ್ರ ಚರ್ಚೆಯನ್ನು ಹುಟ್ಟು ಹಾಕಿದೆ. ದೇಶದ ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ ಎಂದ ಆರೋಪವಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.