ನವದೆಹಲಿ: ಎರಡನೇ ಅಲೆ ಇನ್ನೂ ಮುಗಿದಿಲ್ಲ. ಹೀಗಾಗಿ, ನಿರ್ಬಂಧಗಳನ್ನು ಸಂಪೂರ್ಣವಾಗಿ ಸಡಿಲಗೊಳಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿದೆ.
ಲಸಿಕೆ ಹಾಕಿಸಿಕೊಳ್ಳಲು ಆದ್ಯತೆ ನೀಡಬೇಕು. ಜತೆಗೆ, ನಾಗರಿಕರು ಸಹ ಎಚ್ಚರವಹಿಸಬೇಕು ಮತ್ತು ಕೋವಿಡ್-19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಲಹೆ ನೀಡಿದೆ.
ಜೂನ್ 23ರಿಂದ 29ರವರೆಗಿನ ಅವಧಿಯಲ್ಲಿ ದೇಶದ 71 ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇಕಡ 10ಕ್ಕಿಂತ ಹೆಚ್ಚು ದೃಢಪಟ್ಟಿದೆ. ಹೀಗಾಗಿ, ಸೋಂಕಿನ ಪ್ರಮಾಣ ಹೆಚ್ಚಾಗದಂತೆ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದೆ.
ಜೂನ್ 21ರಿಂದ ಪ್ರತಿ ದಿನ ಸರಾಸರಿ 50 ಲಕ್ಷ ಮಂದಿಗೆ ಲಸಿಕೆ ಹಾಕಲಾಗುತ್ತಿದೆ. ಅಂದರೆ, ಇಡೀ ನಾರ್ವೆ ದೇಶದ ಜನಸಂಖ್ಯೆಯಷ್ಟು ಮಂದಿಗೆ ಲಸಿಕೆ ಹಾಕಲಾಗುತ್ತಿದೆ. ಇದುವರೆಗೆ ಒಟ್ಟು 34 ಕೋಟಿ ಮಂದಿಗೆ ಲಸಿಕೆ ಹಾಕಲಾಗಿದೆ ಎಂದು ವಿವರ ನೀಡಿದೆ.