ಪಲ್ಗರ್: ಮಹಾರಾಷ್ಟ್ರದ ಪಲ್ಗರ್ ಜಿಲ್ಲೆಯ ರಾಸಾಯನಿಕ ಕಂಪೆನಿಯ ಘಟಕವೊಂದರಲ್ಲಿ ಸ್ಫೋಟ ಸಂಭವಿಸಿ ಹತ್ತಿಕೊಂಡ ಬೆಂಕಿಯಿಂದ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಕಳೆದ ರಾತ್ರಿ 11.30ರ ಸುಮಾರಿಗೆ ಬೊಯ್ಸರ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಕೂಡಲೇ ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಲಾಯಿತು. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ರಕ್ಷಣಾ ಕಾರ್ಯ ಸಮಯಕ್ಕೆ ಸರಿಯಾಗಿ ನಡೆದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿತು.
ದುರ್ಘಟನೆಯಲ್ಲಿ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರಿಗೆ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೊಯ್ಸರ್ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.