ನವದೆಹಲಿ: ನಕಲಿ ಕೋವಿಡ್ ಪರೀಕ್ಷೆಗಳ ಬಗ್ಗೆ ವಿವರ ಒದಗಿಸುವಂತೆ ರಾಜ್ಯಗಳಿಗೆ ತಿಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ನಕಲಿ ಕೋವಿಡ್ ಪರೀಕ್ಷಾ ದಂಧೆಯಲ್ಲಿ ಹಲವು ಖಾಸಗಿ ಸಂಸ್ಥೆಗಳು ಭಾಗಿಯಾಗಿರುವುದು ತಿಳಿದಿದೆಯೇ ಎಂದು ರಾಜ್ಯಗಳನ್ನು ಕೇಳಲಾಗಿದೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಉತ್ತರಾಖಂಡದಲ್ಲಿ ನಕಲಿ ಕೋವಿಡ್ ಪರೀಕ್ಷೆಗಳು ನಡೆದಿರುವ ಬಗ್ಗೆ ವರದಿಯಾಗಿದೆ. ಇದರಲ್ಲಿ ಭಾಗಿಯಾಗಿರುವ ಸಂಸ್ಥೆಗಳ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ಉತ್ತರಾಖಂಡ ಸರ್ಕಾರ ತಿಳಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಈ ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲಾ ಪ್ರಯೋಗಾಲಯಗಳ ವಿರುದ್ಧ ಪೊಲೀಸ್ ತನಿಖೆ ನಡೆಯುತ್ತಿದೆ. ಅವುಗಳ ಮೇಲೆ ಪರೀಕ್ಷೆಗಳನ್ನು ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ, ಅವುಗಳ ಎಲ್ಲಾ ಪಾವತಿಗಳನ್ನು ತಡೆಹಿಡಿಯಲಾಗಿದೆ ಎಂದು ಸಚಿವರು ಹೇಳಿದ್ದಾರೆ.