ನವದೆಹಲಿ: ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ನೀಡಲು ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ತಿಳಿಸಿದ್ದಾರೆ.
ಜಾಗತಿಕವಾಗಿ ಮಾನವ ಕಳ್ಳ ಸಾಗಣೆಯನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ಮಾನವ ಕಳ್ಳ ಸಾಗಣೆ ಕುರಿತಾದ ರಾಷ್ಟ್ರೀಯ ಸಮಾಲೋಚನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಕಳ್ಳ ಸಾಗಣೆ (ತಡೆ, ರಕ್ಷಣೆ ಮತ್ತು ಪುನರ್ವಸತಿ) ಮಸೂದೆ-2021ಕ್ಕೆ ಅನುಮೋದನೆ ದೊರೆತಿದೆ. ಇದರಿಂದ, ಅಂತರರಾಷ್ಟ್ರೀಯಮಟ್ಟದಲ್ಲಿ ಪರಸ್ಪರ ಸಹಕಾರ ನೀಡುವ ಕ್ರಮಗಳನ್ನು ವೃದ್ಧಿಸಲಾಗುವುದು ಎಂದು ತಿಳಿಸಿದ್ದಾರೆ.
ಸಂಕಷ್ಟದಲ್ಲಿ ಸಿಲುಕುವ ಸಂತ್ರಸ್ತರನ್ನು ಕೇಂದ್ರೀಕರಿಸಿಕೊಂಡು ಮಸೂದೆ ರೂಪಿಸಲಾಗಿದೆ. ಜತೆಗೆ, ಸಾಕ್ಷಿದಾರರಿಗೆ ಸುರಕ್ಷತೆ ಮತ್ತು ಭದ್ರತೆ ಒದಗಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಹಾಗೂ ತ್ವರಿತ ವಿಚಾರಣೆಗೆ ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ಅಂಶಗಳನ್ನು ಸೇರಿಸಲಾಗಿದೆ ಎಂದು ವಿವರಿಸಿದ್ದಾರೆ.