ನವದೆಹಲಿ: ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ(ಯುಟಿ) ಮಾರ್ಗಸೂಚಿ ನೀಡಿದೆ ಎಂದು ಗೃಹ ಸಚಿವಾಲಯ(ಎಂಎಚ್‌ಎ) ಲೋಕಸಭೆಗೆ ಮಾಹಿತಿ ನೀಡಿದೆ.
ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಅವರು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ಕಳೆದ ವರ್ಷ ಡಿಸೆಂಬರ್ 2ರಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಸಿಸಿಟಿವಿ ಅಳವಡಿಸಲು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದರಂತೆ ಪೊಲೀಸ್ ಠಾಣೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ಕಚೇರಿಗಳಲ್ಲೂ ಸಿಸಿಟಿವಿ ಅಳವಡಿಸಲಾಗುವುದು ಎಂದರು.
ಸುಪ್ರೀಂ ಕೋರ್ಟ್ ನೀಡಿದ ಸಮಯದೊಳಗೆ ತಮ್ಮ ಕಚೇರಿ ಕೇಂದ್ರ ತನಿಖಾ ಸಂಸ್ಥೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಆದರೆ, ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ರಾಜ್ಯಗಳ ವಿಚಾರವಾಗಿದೆ. ಈ ವರ್ಷ ಜುಲೈ 8ರಂದು ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳಿಗೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಲಾಗಿದೆ ಎಂದರು.
ಪೊಲೀಸ್ ಠಾಣೆಗಳು ರಾಜ್ಯ ವಿಷಯವಾಗಿರುವುದರಿಂದ, ಸಿಸಿಟಿವಿಗಳನ್ನು ಹೊಂದಿರುವ ಪೊಲೀಸ್ ಠಾಣೆಗಳ ಸಂಖ್ಯೆಯ ಮಾಹಿತಿಯನ್ನು ಕೇಂದ್ರ ಸರ್ಕಾರದ ಮಟ್ಟದಲ್ಲಿ ನಿರ್ವಹಿಸಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.