ನವದೆಹಲಿ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳಲ್ಲಿ ಮೂರನೇ ಅಲೆಯನ್ನು ತಡೆಗಟ್ಟಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ. ಟೆಸ್ಟ್, ಟ್ರ್ಯಾಕ್, ಟ್ರೀಟ್ ಮತ್ತು ಲಸಿಕೆ ಮಂತ್ರವನ್ನು ಪಾಲಿಸುವಂತೆ ಮುಖ್ಯಮಂತ್ರಿಗಳ ಸಭೆಯಲ್ಲಿ ಮೋದಿ ಒತ್ತಿ ಹೇಳಿದ್ದಾರೆ.
ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಏರುತ್ತಿರುವ ಬಗ್ಗೆ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳದ ಮುಖ್ಯಮಂತ್ರಿಗಳೊಂದಿಗಿನ ವಿಡಿಯೊ ಸಂವಾದದ ಸಂದರ್ಭದಲ್ಲಿ, ಕಳೆದ ವಾರದ ಹೊಸ ಕೋವಿಡ್ ಪ್ರಕರಣಗಳ ಪೈಕಿ ಶೇ. 80 ರಷ್ಟು ಈ ರಾಜ್ಯಗಳಿಂದ ಬಂದಿವೆ ಎಂದು ಮೋದಿ ಹೇಳಿದ್ದಾರೆ.
ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ತೀವ್ರ ಕಳವಳಕಾರಿಯಾಗಿದೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳು ಮೂರನೇ ಅಲೆಯ ಯಾವುದೇ ಸಾಧ್ಯತೆಯನ್ನು ತಡೆಗಟ್ಟಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ ಎಂದು ಪ್ರಧಾನಿ ಪ್ರತಿಪಾದಿಸಿದರು.
'ನಮ್ಮ ಟೆಸ್ಟ್, ಟ್ರ್ಯಾಕ್, ಟ್ರೀಟ್ ಮತ್ತು ಲಸಿಕೆ ತಂತ್ರದೊಂದಿಗೆ ನಾವು ಮುಂದುವರಿಯಬೇಕಾಗಿದೆ'ಎಂದು ಮೋದಿ ಹೇಳಿದರು. ಮೈಕ್ರೊ ಕಂಟೈನ್ಮೆಂಟ್ ವಲಯಗಳ ಬಗ್ಗೆ ವಿಶೇಷ ಗಮನ ನೀಡಬೇಕಾಗಿದೆ ಎಂದಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪು ಸೇರುವುದನ್ನು ತಡೆಯುವ ಅಗತ್ಯವನ್ನು ಒತ್ತಿ ಹೇಳಿದ ಮೋದಿ, ಈ ನಿಟ್ಟಿನಲ್ಲಿ ಜಾಗೃತಿ, ಎಚ್ಚರಿಕೆ ಮತ್ತು ಕಟ್ಟುನಿಟ್ಟಿನ ಕ್ರಮದ ಅವಶ್ಯಕತೆಯಿದೆ ಎಂದು ಹೇಳಿದರು.
ಹೊಸ ತೀವ್ರ ನಿಗಾ ಘಟಕ (ಐಸಿಯು) ಹಾಸಿಗೆಗಳ ವ್ಯವಸ್ಥೆ, ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಇತರ ಎಲ್ಲ ಅಗತ್ಯಗಳಿಗಾಗಿ ಎಲ್ಲಾ ರಾಜ್ಯಗಳಿಗೆ ಹಣವನ್ನು ಒದಗಿಸಲಾಗುತ್ತಿದೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.
ಇತ್ತೀಚೆಗೆ, ಕೇಂದ್ರ ಸರ್ಕಾರ 23,000 ಕೋಟಿಗೂ ಹೆಚ್ಚು ತುರ್ತು ಕೋವಿಡ್ -19 ಪ್ಯಾಕೇಜ್ ಬಿಡುಗಡೆ ಮಾಡಿದೆ ಎಂದು ಮೋದಿ ಗಮನಸೆಳೆದರು.