ನವದೆಹಲಿ: ಭಾರತದಲ್ಲಿ ಶುಕ್ರವಾರ ಒಂದೇ ದಿನ 1 ಕೋಟಿಗೂ ಅಧಿಕ ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸುವಲ್ಲಿ ಆರೋಗ್ಯ ಸಿಬ್ಬಂದಿ ಯಶಸ್ವಿಯಾಗಿದ್ದು ಹೊಸ ದಾಖಲೆ ನಿರ್ಮಾಣವಾಗಿದೆ.
ಭಾರತದಲ್ಲಿ ಶುಕ್ರವಾರ ಒಂದೇ ದಿನ 10,063,931 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 62,09,43,580 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೆ 59,86,36,380 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.
ಆಗಸ್ಟ್ ತಿಂಗಳ ಆರಂಭದಿಂದ ಈವರೆಗೂ 15 ಕೋಟಿ ಡೋಸ್ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇಡೀ ತಿಂಗಳಿನಲ್ಲಿ ಒಟ್ಟು 17 ಕೋಟಿ ಡೋಸ್ ಲಸಿಕೆ ವಿತರಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿತ್ತು. ಇದರ ಮಧ್ಯೆ ಶುಕ್ರವಾರ ಒಂದೇ ದಿನ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊವಿಡ್-19 ಲಿಕೆಯನ್ನು ವಿತರಿಸಲಾಗಿದೆ. ಅತಿಹೆಚ್ಚು ಮಂದಿಗೆ ಲಸಿಕೆಯನ್ನು ವಿತರಿಸಿದ ಟಾಪ್-5 ರಾಜ್ಯಗಳು ಯಾವುವು. ಈ ರಾಜ್ಯಗಳಲ್ಲಿ ಇಂದು ಎಷ್ಟು ಮಂದಿಗೆ ಲಸಿಕೆ ವಿತರಿಸಲಾಯಿತು ಎಂಬುದನ್ನು ಕೆಳಗೆ ಪಟ್ಟಿ ಮಾಡಲಾಗಿದೆ.
ರಾಜ್ಯ - ಲಸಿಕೆ ಪ್ರಮಾಣ:
ಉತ್ತರ ಪ್ರದೇಶ - 2,862,649
ಕರ್ನಾಟಕ - 1,079,588
ಮಹಾರಾಷ್ಟ್ರ - 984,117
ಬಿಹಾರ - 4,98,272
ಗುಜರಾತ್ - 4,89,492
ಕೊವಿಡ್-19 ಲಸಿಕೆ ಪಡೆದವರ ಅಂಕಿ-ಅಂಶಗಳು
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 10356756 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 8320406 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 18316023 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 12948955 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 479148993 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 141794587 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಕೊರೊನಾವೈರಸ್ ಸೋಂಕಿತರಿಗೆ ನಾಲ್ಕು ಹಂತದಲ್ಲಿ ಲಸಿಕೆ
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.
ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?
2021ರ ಆಗಸ್ಟ್ 27ರ ಅಂಕಿ-ಅಂಶಗಳ ಪ್ರಕಾರ, 59,86,36,380 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 59,86,36,380
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 17,64,000
* ಕೊವಿಡ್-19 ಲಸಿಕೆಯ ಲಭ್ಯತೆ - 4,05,05,746