ನವದೆಹಲಿ: ಪಿವಿಸಿ ಒಳಗೊಂಡಂತೆ 100 ಮೈಕ್ರಾನ್‌ಗಿಂತಲೂ ಕಡಿಮೆ ಗಾತ್ರ ಮತ್ತು ಗುಣಮಟ್ಟದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಕುರಿತು ಕರಡು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.
ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠಕ್ಕೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ಈ ಮಾಹಿತಿ ನೀಡಿದರು.
ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಕೇಂದ್ರ ಸರ್ಕಾರವು ಈ ಕುರಿತು ಸೂಕ್ತ ಆದೇಶ ಮತ್ತು ನಿರ್ದೇಶನವನ್ನು ನೀಡಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಪೀಠ ಇದಕ್ಕೆ ಪ್ರತಿಕ್ರಿಯಿಸಿತು.