ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಶುರುವಾಗಿದೆ. ಕಳೆದ ಒಂದೇ ದಿನ 41,831 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 39,258 ಸೋಂಕಿತರು ಗುಣಮುಖರಾಗಿದ್ದರೆ, 541 ಜನರು ಪ್ರಾಣ ಬಿಟ್ಟಿದ್ದಾರೆ.
ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ ಈವರೆಗೂ 47 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಭಾನುವಾರ ರಾತ್ರಿ 7 ಗಂಟೆ ವೇಳೆಗೆ 60,15,8421 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 47,02,98,596 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.
ಭಾರತದಲ್ಲಿ ಚೇತರಿಕೆ ಪ್ರಮಾಣವು ಶೇಕಡಾ 97.36ರಷ್ಟಿದ್ದು ಈವರೆಗೂ 3,08,20,521 ಸೋಂಕಿತರು ಗುಣಮುಖರಾಗಿದ್ದಾರೆ. 4,24,351 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದು, 4,10,952 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಹಂತದಲ್ಲಿ ಅತಿಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳು ಮತ್ತು ಕೇಂದ್ರದಿಂದ ಪೂರೈಸಿದ ಒಟ್ಟು ಲಸಿಕೆ ಪ್ರಮಾಣ ಹಾಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಾಕಿ ಉಳಿದುಕೊಂಡಿರುವ ಲಸಿಕೆ ಪ್ರಮಾಣದ ಕುರಿತು ಒಂದು ವಿಸ್ತೃತ ಮಾಹಿತಿಗಾಗಿ ಓದಿ.
ನಾಲ್ಕು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ:
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.
ವಯಸ್ಕರಿಗೆ ಅತಿಹೆಚ್ಚು ಲಸಿಕೆ ನೀಡಿರುವ ರಾಜ್ಯಗಳ ಪಟ್ಟಿ:
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
ದೇಶದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ:
2021ರ ಆಗಸ್ಟ್ 1ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 49,49,89,550 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:
* ಪೂರೈಕೆಯಾದ ಲಸಿಕೆ ಪ್ರಮಾಣ - 49,49,89,550
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 8,04,220
* ಬಳಕೆ ಆಗಿರುವ ಲಸಿಕೆ ಪ್ರಮಾಣ - 46,70,26,662
* ಕೊವಿಡ್-19 ಲಸಿಕೆಯ ಲಭ್ಯತೆ - 3,00,58,190