ನವದೆಹಲಿ: ಮಣಿಪುರದ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಗೋವಿಂದಾಸ್ ಕೋಂಥೌಜಮ್ ಅವರು ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು.
ದೆಹಲಿಯ ಬಿಜೆಪಿ ಪ‍್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್, ರಾಜ್ಯಸಭಾ ಸಂಸದ ಅನಿಲ್ ಬಲೂನಿ ಮತ್ತು ರಾಜ್ಯದ ಉಸ್ತುವಾರಿ ಸಂಬಿತ್ ಪಾತ್ರಾ ಅವರ ಸಮ್ಮುಖದಲ್ಲಿ ಗೋವಿಂದಾಸ್ ಕೋಂಥೌಜಮ್ ಬಿಜೆಪಿಗೆ ಸೇರಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೋಂಥೌಜಮ್, 'ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಮರ್ಪಕವಾಗಿ ಕೆಲಸ ಮಾಡುತ್ತೇನೆ' ಎಂದು ಹೇಳಿದ್ದಾರೆ.
ವಿಷ್ಣುಪುರ ಕ್ಷೇತ್ರದಿಂದ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾದ ಕೋಂಥೌಜಮ್, ಕೆಲವು ದಿನಗಳ ಹಿಂದೆ ಕಾಂಗ್ರೆಸ್ ತೊರೆದಿದ್ದರು.
ಮಣಿಪುರದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ವಿವಿಧ ಪಕ್ಷಗಳ ನಾಯಕರು ಪಕ್ಷಾಂತರ ಮಾಡುತ್ತಿದ್ದಾರೆ.