ನವದೆಹಲಿ: ದೇಶದಲ್ಲಿ ಚಾಲ್ತಿಯಲ್ಲಿರುವ ಕೋವಿಡ್ ಮಾರ್ಗಸೂಚಿಗಳನ್ನು ಮುಂದಿನ ತಿಂಗಳ ಅಂತ್ಯದವರೆಗೆ ( ಸೆಪ್ಟೆಂಬರ್ ಅಂತ್ಯ) ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.
ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದು ಜಿಲ್ಲೆಗಳು ಮತ್ತು ಸ್ಥಳೀಯ ಆಡಳಿತಗಳು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ದೇಶದ ಕೆಲವು ರಾಜ್ಯಗಳಲ್ಲಿ ಸೋಂಕು ಸಂಖ್ಯೆ ನಿತ್ಯ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳೂ ಏರಿಕೆಯಾಗಿವೆ. ಇದರಿಂದಾಗಿ ಕೆಲವು ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಅಧಿಕವಾಗಿದೆ. ಇದನ್ನು ನಿಯಂತ್ರಿಸಲು ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದ್ದಾರೆ.
ಅತಿ ಹೆಚ್ಚಿನ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಸೂಚಿಸಿರುವ ಅವರು, ಹಬ್ಬ ಹರಿದಿನಗಳಲ್ಲಿ ಜನ ಸೇರುವುದು, ಒಂದೆಡೆ ಹೆಚ್ಚು ಸಂಖ್ಯೆಯ ಜನ ಸಮೂಹ ಸೇರುವುದಕ್ಕೆ ನಿಯಂತ್ರಣ ಹೇರಬೇಕು ಎಂದು ತಿಳಿಸಿದ್ದಾರೆ.
ಪರೀಕ್ಷೆಗೆ ಸೂಚನೆ;
ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕೆ ಮತ್ತು ಕೋವಿಡ್ ಸೂಕ್ತ ವರ್ತನೆ ನಿಯಮಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆಯೂ ಅವರು ಸೂಚಿಸಿದ್ದಾರೆ.
ಅದರಲ್ಲಿಯೂ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.10 ಕ್ಕೂ ಅಧಿಕವಾಗಿರುವ ಜಿಲ್ಲೆಗಳಲ್ಲಿ ಸೋಂಕು ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಲಾಗಿದೆ.