ನವದೆಹಲಿ: ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕುರಿತು ಅಧ್ಯಕ್ಷೆ ಸೋನಿಯಾ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದಾಗಿ ವರದಿಯಾಗಿದೆ.
ಈ ಸಂಬಂಧ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರೊಂದಿಗೆ ಸೋನಿಯಾ ಗಾಂಧಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಪಕ್ಷಕ್ಕೆ ಸೇರ್ಪಡೆ ಬಗ್ಗೆ ಕೆಲವು ನಾಯಕರು ಅಪಸ್ವರವನ್ನು ಎತ್ತಿದ್ದಾರೆ. ಇನ್ನು ಕೆಲವರು ಪಕ್ಷದ ಹಿತದೃಷ್ಟಿಯಿಂದ ಒಲವು ತೋರಿದ್ದಾರೆ ಎಂಬುದು ತಿಳಿದು ಬಂದಿದೆ.
ಈ ಎಲ್ಲದರ ನಡುವೆ ಅಂತಿಮ ನಿರ್ಧಾರವು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ಪಕ್ಷದಲ್ಲಿ ಬದಲಾವಣೆ ಬಯಸಿದ್ದ 23 ನಾಯಕರ ಗುಂಪು, ಪ್ರಶಾಂತ್ ಕಿಶೋರ್ ಕಾಂಗ್ರೆಸ್‌ಗೆ ಸೇರ್ಪಡೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿಗೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಪ್ರಶಾಂತ್ ಕಿಶೋರ್, ಚುನಾವಣಾ ನಿರ್ವಹಣೆಯ ಪ್ರಮುಖ ಜವಾಬ್ದಾರಿ ವಹಿಸಿಕೊಳ್ಳುವ ಕುರಿತಾಗಿ ಚರ್ಚೆ ನಡೆಸಿದ್ದರು. 2014ರ ಲೋಕಸಭಾ ಚುನಾಣೆಯಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ನೆರವಾಗಿದ್ದ ಪ್ರಶಾಂತ್ ಕಿಶೋರ್, ಬಳಿಕ ಜೆಡಿಯು ಪಕ್ಷವನ್ನು ಸೇರಿದ್ದರು.
ಕಳೆದ ವರ್ಷ ಉತ್ತರ ಪ್ರದೇಶದಲ್ಲಿ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಜೊತೆ ಕೆಲಸ ಮಾಡಿರುವ ಪ್ರಶಾಂತ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು.