ಮಂಗಳೂರು: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ವಿಧಿವಶರಾಗಿದ್ದಾರೆ. ಯೋಗ ಮಾಡುವಾಗ ಮನೆಯಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಆಸ್ಕರ್ ಫರ್ನಾಂಡಿಸ್ (80) ವಿಧಿವಶರಾಗಿದ್ದಾರೆ. ಮನೆಯಲ್ಲಿ ಆಯತಪ್ಪಿ ಬಿದ್ದಾಗ ಅವರ ತಲೆಗೆ ಭಾರೀ ಗಾಯವಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.
ಮಂಗಳೂರು ನಗರದ ಯೆನಪೋಯ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೆದುಳಿನ ಶಸ್ತ್ರ ಚಿಕಿತ್ಸೆಯನ್ನು ಸಹ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾದ ದಿನದಿಂದಲೂ ಐಸಿಯುನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂತಾದವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು.
1941ಮಾರ್ಚ್ 27ರಂದು ಉಡುಪಿಯಲ್ಲಿ ಆಸ್ಕರ್ ಫರ್ನಾಂಡಿಸ್ ಜನಿಸಿದ್ದರು. 1980ರಲ್ಲಿ ಮೊದಲ ಬಾರಿ ಉಡುಪಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. 1998ರಿಂದ 4 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಯಪಿಎ ಸರ್ಕಾರದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದರು.
ಆಸ್ಕರ್ ಫರ್ನಾಂಡಿಸ್ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು. ಅವರು ಆಸ್ಪತ್ರೆಗೆ ದಾಖಲಾದಾಗ ಸೋನಿಯಾ ಗಾಂಧಿ ಕುಟುಂಬದವರಿಗೆ ಕರೆ ಮಾಡಿ ಆರೋಗ್ಯವನ್ನು ವಿಚಾರಿಸಿದ್ದರು.
ರಾಜಕೀಯ ಜೀವನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗೆಸ್ ನಾಯಕರಾಗಿದ್ದ ಆಸ್ಕರ್ ಫರ್ನಾಂಡಿಸ್ ನಾಲ್ಕು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು, ಒಂದು ಬಾರಿ ಲೋಕಸಭೆಗೆ ಸದಸ್ಯರಾಗಿ ಚುನಾಯಿತರಾಗಿದ್ದರು.
ಉಡುಪಿಯ ಬೋರ್ಡ್ ಹೈಸ್ಕೂಲ್ ಮತ್ತು ಎಂಜಿಎಂ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದ್ದರು. ಯುವ ಕಾಂಗ್ರೆಸ್ ಮೂಲಕ ರಾಜಕೀಯಕ್ಕ್‌ಎ ಪಾದಾರ್ಪಣೆ ಮಾಡಿದ್ದರು. 1972ರಲ್ಲಿ ಉಡುಪಿ ಮುನ್ಸಿಪಾಲಿಟಿ ಸದಸ್ಯರಾಗಿ ಚುನಾಯಿತರಾಗಿದ್ದರು.
1980ರ ಲೋಕಸಭೆ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಆಸ್ಕರ್ ಫರ್ನಾಂಡಿಸ್‌ಗೆ ಸ್ಪರ್ಧಿಸಲು ಅವಕಾಶ ಸಿಕ್ಕಿತ್ತು. 1.59 ಲಕ್ಷ ಮತಗಳ ಅಂತರದಿಂದ ಗೆದ್ದು ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ್ದರು.
ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್1985ರಲ್ಲಿ ಸಂಸದೀಯ ಕಾರ್ಯದರ್ಶಿಯಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಚುನಾವಣಾ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. 1988ರಿಂದ ಸತತವಾಗಿ 4 ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.
ಯುಪಿ ಸರ್ಕಾರದಲ್ಲಿ ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಖಾತೆ ರಾಜ್ಯ ಸಚಿವರಾಗಿ, ಕಾರ್ಮಿಕ ಖಾತೆ ರಾಜ್ಯ ಸಚಿವರಾಗಿ, ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಸಾವಿನ ಸುದ್ದಿ ಹಬ್ಬಿಸಿದ್ದರು ಸುಮಾರು ಎರಡು ತಿಂಗಳ ಹಿಂದೆ ಆಸ್ಕರ್ ಫರ್ನಾಂಡಿಸ್ ಮೃತಪಟ್ಟಿದ್ದಾರೆ. ಎಂಬ ಸುದ್ದಿಯನ್ನು ಕಿಡಿಗೇಡಿಗಳು ಹಬ್ಬಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ವೈರಲ್ ಆಗಿತ್ತು. ಆಗ ಮಂಗಳೂರು ಪೊಲೀಸರು ಇದು ಸುಳ್ಳು ಸುದ್ದಿ. ಆಸ್ಕರ್ ಫರ್ನಾಂಡಿಸ್ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಪಷ್ಟನೆಯನ್ನು ನೀಡಿದ್ದರು.