ತಿರುವನಂತಪುರಂ: ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯಾದ್ಯಂತ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನೀರಿನ ಮಟ್ಟದ ಮೇಲ್ವಿಚಾರಣೆ ಮಾಡುವಂತೆ ಮತ್ತು ಅಗತ್ಯವಿದ್ದಲ್ಲಿ ಅಣೆಕಟ್ಟು ಗೇಟ್ ಗಳನ್ನು ತೆರೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ತಜ್ಞರ ಸಮಿತಿಗೆ ಸೂಚಿಸಿದ್ದಾರೆ.
ಮಳೆ ಸಂಬಂಧಿತ ಅನಾಹುತಗಳ ಬಗ್ಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ ಮುಖ್ಯಮಂತ್ರಿಗಳು, ಅಣೆಕಟ್ಟು ಗೇಟ್ ಗಳನ್ನು ತೆರೆಯುವ ಬಗ್ಗೆ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಜ್ಞರ ಸಮಿತಿಗೆ ನಿರ್ದೇಶನ ನೀಡಿದರು.
ಅಣೆಕಟ್ಟಿನ ಗೇಟ್ ಗಳನ್ನು ತೆರೆಯುವುದರಿಂದ ಕುಟ್ಟನಾಡಿನಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆಯಿರುವುದರಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(NDRF) ತಂಡವನ್ನು ಆಲಪ್ಪುಳಕ್ಕೆ ಕಳುಹಿಸಲಾಗಿದೆ.
ರಾಜ್ಯದಾದ್ಯಂತ 184 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಜನರನ್ನು ಅಲ್ಲಿಗೆ ಸ್ಥಳಾಂತರಿಸಲು ಎಲ್ಲ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸರ್ಕಾರಿ ಸಂಸ್ಥೆಗಳು ಮತ್ತು ಸ್ಥಳೀಯ ಜನರು ಕಾಣೆಯಾದ ವ್ಯಕ್ತಿಗಳನ್ನು ಹುಡುಕುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಭೂಕುಸಿತ ಸಂಭವಿಸುವ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಜೀವಹಾನಿ, ಆಸ್ತಿ ಮತ್ತು ಬೆಳೆ ನಷ್ಟದ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ಮತ್ತು ಪರಿಹಾರ ವಿತರಣೆಯನ್ನು ತ್ವರಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.