ನವದೆಹಲಿ : ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೋವಿಡ್ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಜಾರಿಗೆಗೆ ಅನುಸರಿಸಿದ ಮಾನದಂಡಗಳ ಪರಿಶೀಲನೆ ನಡೆಸುವಂತೆ ಕೇಂದ್ರದ ಆರೋಗ್ಯ ಸಚಿವಾಲಯ ಸೂಚಿಸಿದೆ.
'ಎರಡೂ ರಾಜ್ಯಗಳಲ್ಲಿ ಕೋವಿಡ್ ಪರೀಕ್ಷೆಗಳ ಪ್ರಮಾಣ ಕಡಿಮೆ ಮಾಡಲಾಗಿದೆ. ಕಳೆದ ವಾರದಿಂದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಕಳೆದ ನಾಲ್ಕು ವಾರಗಳಿಂದ ಅಕ್ಟೋಬರ್ 25ರ ವರೆಗೆ ಪ್ರಕರಣ ಹೆಚ್ಚುತ್ತಿರುವುದು ಕಂಡುಬಂದಿದೆ. ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಕೋವಿಡ್ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಒತ್ತು ನೀಡಬೇಕು' ಎಂದು ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರದ ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಆರತಿ ಅಹುಜಾ ಅವರು ಅಕ್ಟೋಬರ್ 26 ರಂದು ಪತ್ರ ಬರೆದು ಸೂಚಿಸಿದ್ದಾರೆ.