ನವದೆಹಲಿ: 100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿದ ಗುರಿಯನ್ನು ಭಾರತ ಶೀಘ್ರದಲ್ಲೇ ತಲುಪಲಿದ್ದು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಹಾಗೂ ವೇಗವಾಗಿ ಎರಡನೇ ಡೋಸ್ ಲಸಿಕೆ ನೀಡುವತ್ತ ಗಮನ ಹರಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಲಸಿಕೆಗಳು ಲಭ್ಯವಿರುವ ಹಿನ್ನೆಲೆಯಲ್ಲಿ ಎರಡನೇ ಡೋಸ್‌ನ ವ್ಯಾಪ್ತಿಯನ್ನು ಹೆಚ್ಚಿಸಲು ಗಮನಹರಿಸುವಂತೆ ಕೇಂದ್ರ ಹೇಳಿದೆ.
ಜನವರಿ 16ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದರು. ಇಲ್ಲಿಯವರೆಗೆ ದೇಶದಲ್ಲಿ 99 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
ಈಗ ಅಂತರಾಷ್ಟ್ರೀಯ ಪ್ರಯಾಣಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ರೂಪಿಸಬೇಕಾಗಿದ್ದು, ಈ ಸಂಬಂಧ ಸಲಹೆಗಳನ್ನು ನೀಡುವಂತೆ ಕೇಂದ್ರ ಸರ್ಕಾರವು ಎಲ್ಲ ರಾಜ್ಯ ಸರ್ಕಾರಗಳನ್ನು ಕೇಳಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಸೋಮವಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಕಾರ್ಯದರ್ಶಿಗಳು ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿ, ಲಸಿಕೆ ಪ್ರಗತಿಯನ್ನು ಪರಿಶೀಲಿಸಿದ್ದಾರೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.