ತಿರುವನಂತಪುರಂ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇರಳ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪ್ರಸ್ತುತ, ವಾಯುಭಾರ ಕುಸಿತ ಪ್ರದೇಶವು ಶ್ರೀಲಂಕಾದ ಮೇಲೆ ಮತ್ತು ತಮಿಳುನಾಡು ಕರಾವಳಿಯಲ್ಲಿ ಕೇಂದ್ರೀಕೃತವಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ.
ಮುಂದಿನ 3-4 ದಿನಗಳ ಕಾಲ ಪಶ್ಚಿಮಕ್ಕೆ ಕಡಿಮೆ ಒತ್ತಡದ ಚಲನೆ ಮುಂದುವರಿಯಲಿದೆ. ಇದರಿಂದಾಗಿ ಕೇರಳದಲ್ಲಿ ಗುಡುಗು ಸಹಿತ ಮಳೆ ನವೆಂಬರ್ 3ರವರೆಗೆ ಮುಂದುವರಿಯುವ ಸಾಧ್ಯತೆ ಇದೆ. ನವೆಂಬರ್ 3 ರವರೆಗೆ ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ ಮೂರು ದಿನಗಳ ಕಾಲ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಅಲಪ್ಪುಳ, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು. ನವೆಂಬರ್ 2 ರಂದು ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಪಾಲಕ್ಕಾಡ್, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಮಲಪ್ಪುರಂ, ತ್ರಿಶೂರ್, ಎರ್ನಾಕುಳಂ, ಕೊಲ್ಲಂ ಮತ್ತು ತಿರುವನಂತಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.