ಲಖನೌ: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರನ್ನು ಕೇಂದ್ರ ಸಂಪುಟದಲ್ಲಿ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದೆ.
ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, ಹಲವು ರೈತ ಸಂಘಗಳ ಒಕ್ಕೂಟ ಎಸ್‌ಕೆಎಂ, "ಸಾಂವಿಧಾನಿಕ ಹುದ್ದೆಯಲ್ಲಿರುವಾಗ ಹಿಂಸೆಯನ್ನು ಪ್ರಚೋದಿಸುತ್ತಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಸಹ ವಜಾಗೊಳಿಸಬೇಕು" ಎಂದು ಒತ್ತಾಯಿಸಿದೆ.
"ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿಯನ್ನು ತಕ್ಷಣವೇ ಅವರ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಮತ್ತು ಕೋಮು ದ್ವೇಷ ಹರಡಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ "ಮೋನು" ಮತ್ತು ಆತನ ಸಹಚರರನ್ನು ವಿರುದ್ಧ ತಕ್ಷಣವೇ ಕೊಲೆ ಪ್ರಕರಣ ದಾಖಲಿಸಿ ಬಂಧಿಸಬೇಕು" ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.
ಲಖಿಂಪುರ್ ಖೇರಿಯಲ್ಲಿ ವಾಹನಗಳನ್ನು ಹರಿಸಿ ಹಾಡಹಗಲೇ ರೈತರನ್ನು ಕ್ರೂರವಾಗಿ ಹತ್ಯೆ ಮಾಡಿದ ಘಟನೆಯಿಂದ ಇಡೀ ದೇಶವು ಆಕ್ರೋಶಗೊಂಡಿದೆ ಎಂದು ರೈತರ ಒಕ್ಕೂಟ ಪತ್ರದಲ್ಲಿ ಹೇಳಿದೆ.
"ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಮತ್ತು ಆತನ ಗೂಂಡಾ ಸಹಚರರು ಈ ಕೊಲೆಗಡುಕ ದಾಳಿ ನಡೆಸಿದ್ದಾರೆ ಮತ್ತು ಇದು ಉತ್ತರ ಪ್ರದೇಶ ಮತ್ತು ಕೇಂದ್ರ ಸರ್ಕಾರಗಳ ಪಿತೂರಿ ಎಂದು ರೈತ ಒಕ್ಕೂಟ ಆರೋಪಿಸಿದೆ.
ಲಖಿಂಪುರ್ ಖೇರಿಯಲ್ಲಿ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದ ಪರಿಣಾಮ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಸೇರಿ 8 ಮಂದಿ ಮೃತಪಟ್ಟಿದ್ದಾರೆ.