ಚಂಡೀಗಢ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮ್ಮದೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.
ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಹೊಸ ಪಕ್ಷದ ಹೆಸರು ಪಂಜಾಬ್ ಲೋಕ್ ಕಾಂಗ್ರೆಸ್ ಎಂದು ಘೋಷಿಸಿದ್ದಾರೆ.
ತಮ್ಮ ಹೊಸ ಪಕ್ಷದ ಹೆಸರನ್ನು ಬಹಿರಂಗಪಡಿಸಿದ ಕ್ಯಾಪ್ಟನ್ ಅಮರಿಂದರ್ ಸಿಂಗ್, ನಾವು ನಮ್ಮದೇ ಆದ ಪಕ್ಷವನ್ನು ರಚಿಸುವುದಾಗಿ ಮೊದಲೇ ಘೋಷಿಸಿದ್ದರಿಂದ, ನಮ್ಮ ವಕೀಲರ ತಂಡವು ಈ ಪ್ರಕ್ರಿಯೆಯಲ್ಲಿ ಕೆಲಸ ಮಾಡುತ್ತಿದೆ. ನೋಂದಣಿಗಾಗಿ ಭಾರತದ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲಾಗಿದೆ. ಪ್ರಸ್ತಾವಿತ ಹೆಸರಿಗೆ ಚುನಾವಣಾ ಆಯೋಗದ ಅಭ್ಯಂತರವಿಲ್ಲ ಎಂದರು.
ಪಂಜಾಬ್ ಮಾಜಿ ಸಿಎಂ ಏಳು ಪುಟಗಳ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಂಜಾಬ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅಮರಿಂದರ್ ಸಿಂಗ್ ಅವರು ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪಿಸಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಸಾಧ್ಯತೆ ಇದೆ.
ಕೆಲವು ದಿನಗಳ ಹಿಂದಷ್ಟೇ ಕೇಂದ್ರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟವನ್ನು ರೈತ ಹಿತಾಸಕ್ತಿಯಿಂದ ಬಗೆಹರಿಸಿದರೆ ಬಿಜೆಪಿಯೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಅಮರಿಂದರ್ ಸಿಂಗ್ ಅವರು ಹೇಳಿದ್ದರು.