ನವದೆಹಲಿ: ದಕ್ಷಿಣ ಭಾರತದ ಹಲವೆಡೆ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಅಕಾಲಿಕ ಮಳೆಯಾಗುತ್ತಿದೆ.
ನವದೆಹಲಿ: ದಕ್ಷಿಣ ಭಾರತದ ಹಲವೆಡೆ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಅಕಾಲಿಕ ಮಳೆಯಾಗುತ್ತಿದೆ.
ಈ ಮಧ್ಯೆ, ದಕ್ಷಿಣ ಏಷ್ಯಾದಾದ್ಯಂತ ಅಕಾಲಿಕ ಮಳೆ, ಪ್ರವಾಹ, ಭೂಕುಸಿತ ಮತ್ತಿತರ ಅವಘಡಗಳಿಗೆ ಹವಾಮಾನ ಬದಲಾವಣೆಯೇ ಕಾರಣ ಎಂದು ತಜ್ಞರು ವಿಶ್ಲೇಷಿಸುತ್ತಿರುವುದಾಗಿ ವರದಿಯಾಗಿದೆ. ಅರಣ್ಯನಾಶ, ಅತಿಯಾದ ಅಣೆಕಟ್ಟೆಗಳ ನಿರ್ಮಾಣ, ಅತಿಯಾದ ಅಭಿವೃದ್ಧಿ ಯೋಜನೆಗಳು ಪ್ರಕೃತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ ಎಂದು ತಜ್ಞರು ಹೇಳಿರುವುದಾಗಿ 'ದಿ ನ್ಯೂಸ್ ಮಿನಿಟ್' ವರದಿ ಮಾಡಿದೆ.
ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಕಳೆದ ಆರು ವರ್ಷಗಳಲ್ಲೇ ಗರಿಷ್ಠ ಮಳೆಯಾಗಿದೆ. ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದೇ ಇದಕ್ಕೆ ಕಾರಣ. ನಗರದಲ್ಲಿ ಮೋಡ ಕವಿದ ವಾತಾವರಣ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಈ ಪರಿಸ್ಥಿತಿಯು ಸರಿಯಾಗಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ಉಸ್ತುವಾರಿ ಡಾ.ಗೀತಾ ಅಗ್ನಿಹೋತ್ರಿ ತಿಳಿಸಿರುವುದಾಗಿ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿದೆ.
ಅಕಾಲಿಕ ಮಳೆಯೂ ಸೇರಿದಂತೆ ಹವಾಮಾನ ವೈಪರೀತ್ಯಗಳು ಈಗ ಸಾಮಾನ್ಯವಾಗಿಬಿಟ್ಟಿವೆ ಎಂದು ಹವಾಮಾನ ಇಲಾಖೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ನಗರದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾದರೆ ಇನ್ನು ಕೆಲವು ಕಡೆ ಕಡಿಮೆ ಮಳೆಯಾಗುತ್ತಿದೆ ಎಂದೂ ಅವರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.
ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಚೆನ್ನೈಯ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ. ಆಂಧ್ರ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.