ತಿರುವನಂತಪುರ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಪ್ರವೇಶಿಸುತ್ತಿರುವ ಹಿನ್ನಲೆಯಲ್ಲಿ ಮಳೆಯಾಗಲಿದೆ. ಕೇರಳದಲ್ಲಿ ತಿರುವನಂತಪುರಂ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಮೂರು ಗಂಟೆಗಳ ಕಾಲ ಕೇರಳದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಶಬರಿಮಲೆ ಯಾತ್ರೆಗೂ ನಿರ್ಬಂಧ ಹೇರಲಾಗಿದೆ. ಇಂದು ಯಾತ್ರಾರ್ಥಿಗಳಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪಂಪಾದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ದಕ್ಷಿಣ ಭಾರತದಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಪಶ್ಚಿಮ ದಿಕ್ಕಿನ ಮಾರುತಗಳ ಆರಂಭದೊಂದಿಗೆ ಕೇರಳದಲ್ಲಿಯೂ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಗುಡ್ಡಗಾಡು ಪ್ರದೇಶಗಳು ಮತ್ತು ಅರಣ್ಯ ಪ್ರದೇಶಗಳಲ್ಲಿ ಯೆಲ್ಲೋ ಎಚ್ಚರಿಕೆಯೊಂದಿಗೆ ಆರೆಂಜ್ ಅಲರ್ಟ್ ಕೂಡಾ ಕೆಲವೆಡೆ ನೀಡುವಂತೆ ಸೂಚಿಸಲಾಗಿದೆ. ಗುಡುಗು ಮತ್ತು ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.